
ಮೈಸೂರು, 01 ಮಾರ್ಚ್ (ಹಿ.ಸ.):
ಆ್ಯಂಕರ್:ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸ್ ಸಹಯೋಗದಲ್ಲಿ “ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಶೀರ್ಷಿಕೆಯಡಿ “ಫಿಟ್ನೆಸ್ ಫಾರ್ ಆಲ್”, “ಡ್ರಗ್ ಮುಕ್ತ ಕರ್ನಾಟಕ” ಹಾಗೂ “ಸೈಬರ್ ಕ್ರೈಂ ಜಾಗೃತಿ” ಧ್ಯೇಯ ವಾಕ್ಯಗಳೊಂದಿಗೆ ಭಾನುವಾರ ಮೈಸೂರು ಅರಮನೆ ಆವರಣದಲ್ಲಿ 5 ಕಿಮೀ ಹಾಗೂ 10 ಕಿಮೀ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹಾದೇವಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ, ದಕ್ಷಿಣ ವಲಯ ಐಜಿಪಿ ಡಾ. ಎಂ ಬಿ ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪೊಲೀಸ್ ಸಿಬ್ಬಂದಿ, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ನಗರ ಸಾರ್ವಜನಿಕರು ಉತ್ಸಾಹದಿಂದ ಮ್ಯಾರಥಾನ್ನಲ್ಲಿ ಭಾಗವಹಿಸಿದರು. ಆರೋಗ್ಯಕರ ಜೀವನಶೈಲಿ, ಮಾದಕವಸ್ತು ವಿರೋಧಿ ಜಾಗೃತಿ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಮ್ಯಾರಥಾನ್ ಆಯೋಜಿಸಲಾಗಿತ್ತು.
5K ಮತ್ತು 10K ವಿಭಾಗಗಳಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಗಣ್ಯರು ಪ್ರಶಸ್ತಿ ವಿತರಿಸಿದರು. ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ದಿಸೆಯಲ್ಲಿ ಈ ಕಾರ್ಯಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa