ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ರೇಣುಕಾಚಾರ್ಯರ ತತ್ವಗಳು ಆದರ್ಶ: ಸಚಿವ ಎಚ್.ಕೆ. ಪಾಟೀಲ್
ಗದಗ, 01 ಮಾರ್ಚ್ (ಹಿ.ಸ.): ಆ್ಯಂಕರ್: ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಜಗದ್ಗುರು ರೇಣುಕಾಚಾರ್ಯರ ಸಂದೇಶವು ಇಂದಿನ ಅಶಾಂತಿಯ ಜಗತ್ತಿಗೆ ಅತ್ಯಂತ ಅವಶ್ಯಕವಾಗಿದೆ ಎಂದು ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸ
ಫೋಟೋ


ಗದಗ, 01 ಮಾರ್ಚ್ (ಹಿ.ಸ.):

ಆ್ಯಂಕರ್: ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಜಗದ್ಗುರು ರೇಣುಕಾಚಾರ್ಯರ ಸಂದೇಶವು ಇಂದಿನ ಅಶಾಂತಿಯ ಜಗತ್ತಿಗೆ ಅತ್ಯಂತ ಅವಶ್ಯಕವಾಗಿದೆ ಎಂದು ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಹೇಳಿದರು.

ಗದಗ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿಂದು

ಆಯೋಜಿಸಲಾಗಿದ್ದ 'ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ - 2026' ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ರೇಣುಕಾಚಾರ್ಯರು ಕೇವಲ ಒಂದು ಧರ್ಮಕ್ಕೆ ಸೀಮಿತವಾಗದೆ, ಸಕಲ ಜೀವಾತ್ಮರಿಗೂ ಲೇಸನ್ನು ಬಯಸುವ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದಾರೆ. ದಯೆ, ಕರುಣೆ, ಅಹಿಂಸೆ ಮತ್ತು ಸತ್ಯದ ಹಾದಿಯಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಿಳಿಸಿದರು.

ಸರ್ಕಾರಿ ಜಯಂತಿಗಳು ಕೇವಲ ಅಧಿಕಾರಿಗಳ ಕಾರ್ಯಕ್ರಮವಾಗದೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಅರ್ಥಪೂರ್ಣವಾಗಬೇಕು. ಜಿಲ್ಲಾ ರಂಗಮಂದಿರವು ಇಂತಹ ಸಾಂಸ್ಕೃತಿಕ ಮತ್ತು ವೈಚಾರಿಕ ಕಾರ್ಯಕ್ರಮಗಳಿಂದ ಸದಾ ತುಂಬಿರಲಿ ಎಂದು ಆಶಿಸಿದರು.

ಇಂದಿನ ದಿನಗಳಲ್ಲಿ ಶ್ರೀಮಂತ ರಾಷ್ಟ್ರಗಳ ನಡುವೆ ನಡೆಯುತ್ತಿರುವ ಯುದ್ಧ ಮತ್ತು ಹಿಂಸೆಯ ವಾತಾವರಣವು ಆತಂಕಕಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಭಾರತೀಯ ಸಂಸ್ಕೃತಿಯ ಶಾಂತಿ ಮಂತ್ರ ಮತ್ತು ರೇಣುಕಾಚಾರ್ಯರ ತತ್ವಗಳು ಜಗತ್ತಿಗೆ ದಾರಿದೀಪವಾಗಲಿ ಎಂದು ಸಚಿವ ಡಾ. ಎಚ್ ಕೆ ಪಾಟೀಲ ಹಾರೈಸಿದರು.

ಉಪನ್ಯಾಸಕರದ ಡಾ. ಜಯಶ್ರೀ ಮಲ್ಲಿಕಾರ್ಜುನ್ ಹೊಸಮನಿ ಮಾತನಾಡಿ, ಜಗದ್ಗುರು ರೇಣುಕಾಚಾರ್ಯರು ಅಗಸ್ತ್ಯ ಮಹರ್ಷಿಗಳಿಗೆ ಬೋಧಿಸಿದ 'ಶಿವಾದ್ವೈತ ಸಿದ್ಧಾಂತ'ವು 'ಸಿದ್ಧಾಂತ ಶಿಖಾಮಣಿ' ಗ್ರಂಥದ ಮೂಲಕ ನಮಗೆ ಲಭ್ಯವಾಗಿದೆ. ಈ ಗ್ರಂಥವು ಅಷ್ಟಾವರಣ, ಪಂಚಾಚಾರ ಮತ್ತು ಷಟಸ್ಥಲಗಳ ಮೂಲಕ ಮನುಷ್ಯನು ಹೇಗೆ ಮುಕ್ತಿಯನ್ನು ಪಡೆಯಬಹುದು ಎಂಬುದನ್ನು ಹಂತ-ಹಂತವಾಗಿ ವಿವರಿಸುತ್ತದೆ. ಮನುಷ್ಯ ಜನ್ಮವು ಅತ್ಯಂತ ದುರ್ಲಭವಾದುದು. ಜೀವನದಲ್ಲಿ ಸಾರ್ಥಕತೆ ಪಡೆಯಲು ಅಹಿಂಸೆ, ಸತ್ಯ, ಅಸ್ತೇಯ, ಬ್ರಹ್ಮಚರ್ಯ, ದಯೆ, ಕ್ಷಮೆ, ದಾನ, ಪೂಜೆ, ಜಪ ಮತ್ತು ಧ್ಯಾನ ಎಂಬ ಹತ್ತು ಧರ್ಮ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು. ರೇಣುಕಾಚಾರ್ಯರು ಅಂದಿನ ಕಾಲದಲ್ಲೇ ಮಹಿಳೆಯರಿಗೆ ಸಮಾನ ಗೌರವ ನೀಡಿದ್ದರು. ಲಿಂಗಧಾರಣೆ ಮಾಡಿದವರೆಲ್ಲರೂ ಸಮಾನರು ಎಂಬ ತತ್ವದ ಮೂಲಕ ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿಯನ್ನು ಮಾಡಿದ್ದರು ಎಂದು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ.ಕೆ.ಆರ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಡಾ. ಬಸವರಾಜ ಬಳ್ಳಾರಿ, ಶ್ರೀನಿವಾಸ್ ಮೂರ್ತಿ, ಎಸ್ ಎನ್ ಬಳ್ಳಾರಿ, ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಕು. ಅಕ್ಷತಾ ಹಿರೇಮಠ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತ ಪಡಿಸಿದರು. ಪ್ರೊ. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande