ವೃತ್ತಿಪರ ಕೌಶಲ್ಯಗಳಿಂದ ಮಹಿಳೆಯರು ಉನ್ನತ ಸಾಧನೆ ಮಾಡಬೇಕು –ಮಹಿಳಾ ವಿವಿ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ
ವಿಜಯಪುರ, 12 ಮಾರ್ಚ್ (ಹಿ.ಸ.) ಆ್ಯಂಕರ್ : ಮಹಿಳೆಯರು ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಸಾಧಿಸಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು. ವಿಜಯಪುರದ ಮಹಿಳಾ ವಿಶ್ವವ
Vv said


ವಿಜಯಪುರ, 12 ಮಾರ್ಚ್ (ಹಿ.ಸ.)

ಆ್ಯಂಕರ್ : ಮಹಿಳೆಯರು ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಸಾಧಿಸಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.

ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ವ್ಯವಹಾರ ಮತ್ತು ವಾಣಿಜ್ಯ ವಿಭಾಗ ಸಹಯೋಗದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಗುರುವಾರ ಆಯೋಜಿಸಿದ್ದ “ವೃತ್ತಿಪರ ಜಾಗೃತಿ ಕಾರ್ಯಕ್ರಮ” ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2026ರ ಅಂಕಿಅಂಶಗಳ ಪ್ರಕಾರ ದಲಿತ ಸಮುದಾಯದ ಸುಮಾರು 38 ಶೇಕಡಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು. ಮೊಬೈಲ್ ತಂತ್ರಜ್ಞಾನದ ಮೂಲಕ ಜಗತ್ತಿನ ಆಗುಹೋಗುಗಳನ್ನು ತಿಳಿದುಕೊಳ್ಳುವ ಅವಕಾಶ ಹೆಚ್ಚಿದ್ದು, ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ತರ ಪ್ರಗತಿ ಕಂಡುಬಂದಿದೆ. ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದು, ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಜಯಪುರದ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ ಡಾ. ಮಲ್ಲಮ್ಮ ಯಾಳವಾರ ಮಾತನಾಡಿ, ಇತ್ತೀಚಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯುತ್ತಿದ್ದರೂ ತಕ್ಕ ಜ್ಞಾನವನ್ನು ಸಂಪಾದಿಸುವಲ್ಲಿ ಹಿಂದೆ ಬೀಳುತ್ತಿರುವುದು ಆತಂಕಕಾರಿ ಎಂದರು. ಮಹಿಳೆಯರು ಕೇವಲ ಶಿಕ್ಷಣ ಪಡೆದರೆ ಸಾಕಾಗುವುದಿಲ್ಲ; ಅವರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಹಾಗೂ ಕಾನೂನುಬದ್ಧ ಹಕ್ಕುಗಳ ಕುರಿತು ಅರಿವು ಹೊಂದಬೇಕು ಎಂದು ಹೇಳಿದರು. ಮಹಿಳೆಯರು ಸಮಾನತೆಯನ್ನು ಸಾಧಿಸಲು ದೃಢ ಸಂಕಲ್ಪದೊಂದಿಗೆ ಮುಂದೆ ಬರಬೇಕೆಂದು ಕರೆ ನೀಡಿದರು.

ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಇಂದಿನ ದಿನಗಳಲ್ಲಿ ಸಾಧನೆ ಮಾಡಲು ಯಾವುದೇ ಅಡೆತಡೆಗಳಿಲ್ಲ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ನಮ್ಮ ಮುಂದೆ ಉದಾಹರಣೆಯಾಗಿ ಇದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಕನಸುಗಳನ್ನು ಹೊತ್ತು ವಿಶ್ವವಿದ್ಯಾಲಯಕ್ಕೆ ಬಂದಿದ್ದೀರಿ; ಆ ಕನಸುಗಳನ್ನು ನನಸಾಗಿಸಿ ವಿಶ್ವವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಪ್ರೇರೇಪಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಳಗಾವಿಯ ಐಸಿಎಸ್ಐ ಶಾಖೆಯ ಅಧ್ಯಕ್ಷ ಸಿ.ಎಸ್. ತುಕಾರಾಮ್ ಜಾಧವ್ ಮಾತನಾಡಿ, ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯಗಳು ಅತ್ಯಂತ ಅಗತ್ಯ ಎಂದು ಹೇಳಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಅನುಮಾನ, ಅವಮಾನ ಮತ್ತು ಸನ್ಮಾನ ಎಂಬ ಮೂರು ಹಂತಗಳನ್ನು ದಾಟಿದಾಗಲೇ ಜೀವನದಲ್ಲಿ ಯಶಸ್ಸು ದೊರೆಯುತ್ತದೆ ಎಂದು ಹೇಳಿದರು.

ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಐಸಿಎಸ್ಐ ಬೆಳಗಾವಿ ಶಾಖೆಯ ಸಿ.ಎಸ್. ಅಪ್ಪಣ್ಣ ಅವರು ಕಂಪನಿ ಸೆಕ್ರೆಟರಿ ಕೋರ್ಸ್, ಅದರ ಅವಕಾಶಗಳು ಹಾಗೂ ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಂಪ್ಲೆಕ್ಸ್ ಗ್ರೋ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ಸಿ.ಎಚ್. ಮಹಾರುದ್ರಪ್ಪ ಜಡಿ ಮಾತನಾಡಿ, ದೊಡ್ಡ ಕನಸುಗಳಿದ್ದರೆ ಸಾಧನೆಯೂ ದೊಡ್ಡದಾಗುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ತಮ್ಮ ಗುರಿಗಳತ್ತ ಶ್ರಮಿಸಿದರೆ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವ್ಯವಹಾರ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ ಎನ್.ಎಲ್., ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಲಕ್ಷ್ಮೀದೇವಿ ವೈ., ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳು, ಸಂಶೋಧನಾ ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande