
ವಿಜಯಪುರ, 12 ಮಾರ್ಚ್ (ಹಿ.ಸ.):
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣವೇ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರದಲ್ಲಿ ಈಗಾಗಲೇ 8 ರಿಂದ 10 ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿನ ಹಾಹಾಕಾರ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹೇಳಿದರು. ಹೀಗಾಗಿ ಮುಂಬರುವ ಪರಿಸ್ಥಿತಿಯನ್ನು ಮನಗಂಡು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ತಿಳಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆ ಖಚಿತಪಡಿಸಲು ಆಡಳಿತ ಯಂತ್ರ ಚುರುಕಾಗಬೇಕು. ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಕೂಡಲೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ. ಯಾವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆ ಎಂಬುದನ್ನು ಪರಿಶೀಲಿಸಬೇಕು. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಸಮಗ್ರ ಯೋಜನೆ ರೂಪಿಸಬೇಕು ಎಂದು ಅವರು ಹೇಳಿದರು.
ಈ ಬಾರಿ ಬಿಸಿಲಿನ ತೀವ್ರತೆ ಹೆಚ್ಚಿರುವುದರಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇರುವುದನ್ನು ತಳ್ಳಿಹಾಕಲಾಗುವುದಿಲ್ಲ. ಜೊತೆಗೆ ಜಾನುವಾರುಗಳಿಗೆ ಮೇವಿನ ಕೊರತೆಯೂ ಉಂಟಾಗಬಹುದು. ಆದ್ದರಿಂದ ಈಗಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡರೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಶೇಷ ಮುತುವರ್ಜಿ ವಹಿಸಿ ಕುಡಿಯುವ ನೀರಿನ ಪೂರೈಕೆ ಕುರಿತು ಸಮಗ್ರ ಚರ್ಚೆ ನಡೆಸಬೇಕು ಹಾಗೂ ಈ ಸಭೆಗೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು ಎಂದು ಸಂಸದರು ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande