
ವಿಜಯಪುರ, 13 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಶಾಲಾ–ಕಾಲೇಜುಗಳ ಸಮಯ ಬದಲಾವಣೆ ಮಾಡುವಂತೆ ಜಿಲ್ಲಾ ನೌಕರರ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಜಿಲ್ಲಾಧಿಕಾರಿ ಕೆ. ಆನಂದ ಅವರಿಗೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸುರೇಶ ಶಡಶ್ಯಾಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಸುರೇಶ ಶಡಶ್ಯಾಳ, ಜಿಲ್ಲೆಯಲ್ಲಿ ಈಗಾಗಲೇ ತಾಪಮಾನ 36 ರಿಂದ 38 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದ್ದು, ಈ ವರ್ಷ ಹಿಂದಿನ ವರ್ಷಗಳಿಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ ಎಂದು ಹೇಳಿದರು.
ಬಿಸಿಲಿನ ತೀವ್ರತೆಗೆ ಗ್ರಾಮೀಣ ಪ್ರದೇಶಗಳಿಂದ ಕಚೇರಿಗಳಿಗೆ ಆಗಮಿಸುವ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅದೇ ರೀತಿ ಶಾಲೆ–ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ನೌಕರರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಶಾಲಾ–ಕಾಲೇಜುಗಳ ಕಾರ್ಯಾವಧಿಯನ್ನು ಮೇ 31ರವರೆಗೆ ಬೆಳಗ್ಗೆ 8:30 ರಿಂದ ಮಧ್ಯಾಹ್ನ 1:30ರವರೆಗೆ ಬದಲಾಯಿಸುವಂತೆ ತಕ್ಷಣ ಆದೇಶ ಹೊರಡಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಖಜಾಂಚಿ ಜುಬೇರ ಕೆರೂರ, ಪ್ರಧಾನ ಕಾರ್ಯದರ್ಶಿ ಶಿವರಾಜ ಬಿರಾದಾರ, ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಸಿದ್ದು ಹಂಚಿನಾಳ, ನಿಜು ಮೇಲಿನಕೆರ, ರಾಮನಗೌಡ ಪಾಟೀಲ, ಎಸ್.ಎಸ್. ಮಗ್ಗದ, ವಿಜಯಕುಮಾರ ಉಮಶೆಟ್ಟಿ, ಖಾಸಿಂಸಾಬ ಮಸಳಿ, ತಾಂಡುರ ಮೇತ್ರಿ, ಬಸವರಾಜ ರಾಹುಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande