
ಬೆಂಗಳೂರು, 15 ಮಾರ್ಚ್ (ಹಿ.ಸ.):
ಆ್ಯಂಕರ್:
ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಆದಿಚುಂಚನಗಿರಿ ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಕುರಿತು ಆಡಿರುವ ಮಾತುಗಳು ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯವಾಗಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿಂದೂ ಧರ್ಮ ಮತ್ತು ಹಿಂದೂ ಧಾರ್ಮಿಕ ಗುರುಗಳ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಇರುವ ಧೋರಣೆಗೆ ಇದು ಮತ್ತೊಂದು ಉದಾಹರಣೆಯಾಗಿದೆ ಎಂದು ಹೇಳಿದರು. ಬಹಿರಂಗ ವೇದಿಕೆಯಲ್ಲಿ ಪೂಜ್ಯ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಗುರುನಿಂದನೆ ಮಾಡಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಹಿಂದೂ ಧರ್ಮ ಮತ್ತು ಧಾರ್ಮಿಕ ಗುರುಗಳ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಕಿಂಚಿತ್ತಾದರೂ ಗೌರವವಿದ್ದರೆ, ತಕ್ಷಣವೇ ರಮೇಶ್ ಬಂಡಿಸಿದ್ದೇಗೌಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
“ಒಕ್ಕಲಿಗ ಒಕ್ಕದಿರೆ ಬಿಕ್ಕುವುದು ಜಗವೆಲ್ಲ” ಎಂಬ ಮಾತಿದೆ. ಒಕ್ಕಲಿಗ ಸಮುದಾಯದ ಕೆಂಗಣ್ಣಿಗೆ ಕಾಂಗ್ರೆಸ್ ಪಕ್ಷ ಗುರಿಯಾದರೆ ಅದು ರಾಜಕೀಯವಾಗಿ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರ್. ಅಶೋಕ ಎಚ್ಚರಿಕೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa