
ಕಟಕ, 16 ಮಾರ್ಚ್ (ಹಿ.ಸ.):
ಆ್ಯಂಕರ್:
ಒಡಿಶಾದ ಕಟಕ್ ನಗರದಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆರೈಕೆ ಕೇಂದ್ರದ ಐಸಿಯುನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಬೆಳಗಿನ ಜಾವ ಸುಮಾರು 2.30 ರಿಂದ 3 ಗಂಟೆಯ ನಡುವೆ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದೆಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರೂ, ಐಸಿಯುನಲ್ಲಿ ವೆಂಟಿಲೇಟರ್ ಬೆಂಬಲದಲ್ಲಿದ್ದ ಹಲವಾರು ರೋಗಿಗಳು ಹೊಗೆ ಉಸಿರಾಟದಿಂದ ಉಸಿರುಗಟ್ಟುವಿಕೆಗೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿ ಅವಘಡದ ಬಳಿಕ ಐಸಿಯುನಲ್ಲಿದ್ದ ಇತರ ರೋಗಿಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ತಕ್ಷಣವೇ ವೈದ್ಯಕೀಯ ಕಾಲೇಜಿನ ಇತರ ವಾರ್ಡ್‌ಗಳ ಐಸಿಯುಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣವೇ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಆಸ್ಪತ್ರೆಗೂ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಈ ವೇಳೆ ಆರೋಗ್ಯ ಕಾರ್ಯದರ್ಶಿ, ಕಟಕ್ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಘಟನೆ ಕುರಿತು ವಿವರಗಳನ್ನು ಪಡೆದರು.
ಅಗ್ನಿ ಅವಘಡದಲ್ಲಿ 10 ಜನರು ಸಾವನ್ನಪ್ಪಿರುವುದಾಗಿ ಮುಖ್ಯಮಂತ್ರಿ ಮಾಝಿ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಅವರು ಘೋಷಿಸಿದರು.
ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ವೇಳೆ ಕನಿಷ್ಠ 11 ಆಸ್ಪತ್ರೆ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa