
ಬೆಂಗಳೂರು, 16 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರತಿ ಪಕ್ಷದ ನಾಯಕ ಆರ್.ಅಶೋಕ , ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ” ಎನ್ನುವಂತೆ ಮುಖ್ಯಮಂತ್ರಿ ಆದಿಯಾಗಿ ಸಚಿವರು ಹಾಗೂ ಅಧಿಕಾರಿಗಳು ಸೇರಿ ಇಡೀ ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಟೀಕಿಸಿದ್ದಾರೆ.
ಕಳೆದ ಮೂರೂವರೆ ವರ್ಷಗಳಲ್ಲಿ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಸೇರಿ 195 ಹಿರಿಯ ಶ್ರೇಣಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಪ್ರಕರಣಗಳು ದಾಖಲಾಗಿರುವುದು, ರಾಜ್ಯದಲ್ಲಿ ಅವ್ಯವಹಾರ ಎಷ್ಟು ವ್ಯಾಪಕವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
“ಮೂರು ಬಿಟ್ಟವರು ಊರಿಗೇ ದೊಡ್ಡವರು” ಎನ್ನುವಂತೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲುವುದು ಖಚಿತ ಎಂದು ತಿಳಿದಿರುವ ಕೆಲ ಸಚಿವರು ಹಾಗೂ ಶಾಸಕರು ಎಗ್ಗಿಲ್ಲದೆ ಲೂಟಿ ಹೊಡೆಯುತ್ತಿದ್ದಾರೆ. ಇದರಿಂದ ಅಧಿಕಾರಿಗಳಲ್ಲಿಯೂ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಈ ಕಡು ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ರಾಜ್ಯದ ಜನರಿಗೆ ನೆಮ್ಮದಿ ಸಿಗುವುದಿಲ್ಲ ಎಂದು ಅಶೋಕ್ ಕಿಡಿಕಾರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa