
ಕಾಬೂಲ್, 17 ಮಾರ್ಚ್ (ಹಿ.ಸ.):
ಆ್ಯಂಕರ್:ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ನಡೆದ ಭೀಕರ ವೈಮಾನಿಕ ದಾಳಿಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದ್ದು, ಪ್ರದೇಶದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ.
ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮಾದಕ ವ್ಯಸನ ನಿರ್ಮೂಲನಾ ಕೇಂದ್ರ ಗುರಿಯಾಗಿದ್ದು, ಕಟ್ಟಡದ ಬಹುಭಾಗ ಬೆಂಕಿಗೆ ಆಹುತಿಯಾಗಿದೆ. ದಾಳಿಯ ವೇಳೆ ಕೇಂದ್ರದಲ್ಲಿ 2,000ಕ್ಕೂ ಹೆಚ್ಚು ಮಂದಿ ಇದ್ದರು ಎಂದು ವರದಿಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.
ಪಾಕಿಸ್ತಾನ ತನ್ನ ಹೇಳಿಕೆಯಲ್ಲಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರೆ, ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.
ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಪ್ರತಿಕ್ರಿಯಿಸಿ,
“ಇದು ಅಫ್ಘಾನಿಸ್ತಾನದ ಸಾರ್ವಭೌಮತ್ವದ ಉಲ್ಲಂಘನೆ. ಮಾತುಕತೆ ಮತ್ತು ರಾಜತಾಂತ್ರಿಕ ಪ್ರಯತ್ನಗಳ ಸಮಯ ಮುಗಿದಿದೆ. ಈಗ ನಾವು ಸೇಡು ತೀರಿಸಿಕೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.
ದಾಳಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಮತ್ತು ನಾಗರಿಕರು ಸಾವಿಗೀಡಾಗಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಅಫ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ,
“ಆಸ್ಪತ್ರೆ ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸುವುದು ಯುದ್ಧ ಅಪರಾಧ” ಎಂದು ಖಂಡಿಸಿದ್ದಾರೆ.
ಇದೇ ವೇಳೆ ಮೊಹಮ್ಮದ್ ನಬಿ ಕೂಡ ದಾಳಿಯನ್ನು “ಹೃದಯವಿದ್ರಾವಕ ಘಟನೆ” ಎಂದು ವರ್ಣಿಸಿ, ಆಸ್ಪತ್ರೆಯ ಹೊರಗೆ ತಮ್ಮ ಬಂಧುಗಳಿಗಾಗಿ ಕಾಯುತ್ತಿದ್ದ ಕುಟುಂಬಗಳ ನೋವನ್ನು ಹಂಚಿಕೊಂಡಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಫೆಬ್ರವರಿ 21 ನಂತರ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಎರಡೂ ದೇಶಗಳು ಪರಸ್ಪರ ದಾಳಿಗಳನ್ನು ನಡೆಸುತ್ತಿದ್ದು, ಸಾವುನೋವುಗಳು ಹೆಚ್ಚುತ್ತಿವೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa