
ವಿಜಯಪುರ, 17 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ನಗರದಲ್ಲಿ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ವಿದ್ಯಾರ್ಥಿಗಳು ಮನವಿ ಸ್ವೀಕರಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಕಚೇರಿಗೆ ನುಗ್ಗಲು ಯತ್ನಿಸಿದರು. ಬಳಿಕ ಆಗಮಿಸಿದ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿದರು.
ಈ ವೇಳೆ ಎಬಿವಿಪಿಯ ಕೇಂದ್ರೀಯ ಕಾರ್ಯಸಮಿತಿ ಸದಸ್ಯ ಸಚಿನ ಕುಳಗೇರಿ ಮಾತನಾಡಿ, ಕಳೆದ 5-6 ವರ್ಷಗಳಿಂದ ರಾಜ್ಯದ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಆರೋಪಿಸಿದರು. ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಸರ್ಕಾರ ಮೂರು ವರ್ಷಗಳಿಂದ ಯಾವುದೇ ನೇಮಕಾತಿ ನಡೆಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ 43 ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇದ್ದು, ಲಕ್ಷಾಂತರ ಅಭ್ಯರ್ಥಿಗಳು ವರ್ಷಗಳಿಂದ ನಿರೀಕ್ಷೆಯಲ್ಲಿ ಇದ್ದಾರೆ ಎಂದರು.
ಜಿಲ್ಲಾ ಸಂಚಾಲಕ ಸಂದೀಪ ಅರಳಗುಂಡಿ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ 79,694 ಹಾಗೂ ಉನ್ನತ ಶಿಕ್ಷಣ ಇಲಾಖೆಯಲ್ಲಿ 13,599 ಹುದ್ದೆಗಳು ಖಾಲಿ ಇರುವುದರಿಂದ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ಅವರು ಆರೋಪಿಸಿದರು.
ಕಾನೂನು ವಿದ್ಯಾರ್ಥಿ ವಿಭಾಗದ ಪ್ರಮುಖ ಮಂಜುನಾಥ ಹಳ್ಳಿ ಮಾತನಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿ ಹದಗೆಟ್ಟಿದ್ದು, ಸರಿಯಾದ ಅನುದಾನ ಇಲ್ಲದ ಕಾರಣ ವಿದ್ಯಾರ್ಥಿಗಳ ಮೇಲೆಯೇ ಶುಲ್ಕದ ಭಾರ ಹೆಚ್ಚುತ್ತಿದೆ ಎಂದರು. ಖಾಯಂ ಸಿಬ್ಬಂದಿ ಕೊರತೆಯಿಂದ ಫಲಿತಾಂಶ, ಅಂಕಪಟ್ಟಿ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಹೇಳಿದರು.
ವಿದ್ಯಾರ್ಥಿ ವೇತನ ಕೂಡ ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ ಎಂದು ಹೇಳಿದರು.
ಬೇಡಿಕೆಗಳು:
ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ತಕ್ಷಣ ಪ್ರಾರಂಭಿಸಬೇಕು
ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ನೀಡಬೇಕು
ವಿಶ್ವವಿದ್ಯಾಲಯಗಳಿಗೆ ಸಮರ್ಪಕ ಅನುದಾನ ಒದಗಿಸಬೇಕು
ವಿದ್ಯಾರ್ಥಿಗಳಿಗೆ ಸಮಯಕ್ಕೆ ಫಲಿತಾಂಶ ಹಾಗೂ ಅಂಕಪಟ್ಟಿ ನೀಡಬೇಕು
ವಿದ್ಯಾರ್ಥಿ ವೇತನವನ್ನು ಸರಿಯಾಗಿ ವಿತರಿಸಬೇಕು
ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಬಿವಿಪಿ ಕಾರ್ಯಕರ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande