
ವಿಜಯಪುರ, 17 ಮಾರ್ಚ್ (ಹಿ.ಸ.)
ಆ್ಯಂಕರ್ : ಸರಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕೆಂದು ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಬ್ಯಾಂಕ್ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ಆಯೋಜಿಸಲಾದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಹಾಗೂ ಡಿಸ್ಟ್ರಿಕ್ಟ್ ಲೆವೆಲ್ ರಿವ್ಯೂ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸೇರಿದಂತೆ ಅನೇಕ ಯೋಜನೆಗಳಡಿ ಸಾವಿರಾರು ಫಲಾನುಭವಿಗಳು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದರೂ, ಅವುಗಳನ್ನು ಬ್ಯಾಂಕ್ಗಳು ಬಾಕಿ ಉಳಿಸಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
“ಒಂದು ವಾರದೊಳಗೆ ಬಾಕಿ ಉಳಿದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಸಂಪೂರ್ಣವಾಗಿ ವಿಲೇವಾರಿ ಮಾಡಬೇಕು. ವಿಳಂಬವಾದರೆ ಸಂಬಂಧಿಸಿದ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದರು.
ಅಲ್ಪಸಂಖ್ಯಾತರು, ಮಹಿಳೆಯರು, ಪ.ಜಾ/ಪ.ಪಂ ವರ್ಗಗಳಂತಹ ದುರ್ಬಲ ವರ್ಗದ ಗ್ರಾಹಕರಿಗೆ ಬ್ಯಾಂಕ್ಗಳು ಸಹಾನುಭೂತಿ ಮತ್ತು ಸಕಾರಾತ್ಮಕ ಮನೋಭಾವದಿಂದ ಸ್ಪಂದಿಸಬೇಕು. ಅರ್ಜಿಗಳಲ್ಲಿ ದಾಖಲೆಗಳು ಅಪೂರ್ಣವಾಗಿದ್ದರೆ ಗ್ರಾಹಕರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದರು.
ಆರ್ಬಿಐ ಮಾರ್ಗಸೂಚಿಗಳ ಪ್ರಕಾರ ಬ್ಯಾಂಕ್ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಯಾವುದೇ ಅರ್ಜಿಯನ್ನು ಅನಾವಶ್ಯಕವಾಗಿ ಬಾಕಿ ಉಳಿಸಿಕೊಳ್ಳಬಾರದು ಎಂದು ಸ್ಪಷ್ಟಪಡಿಸಿದರು. ವಿವಿಧ ಯೋಜನೆಗಳಾದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ , ಉದ್ಯೋಗಿನಿ, ಸ್ವಾವಲಂಬಿ ಸಾರಥಿ, ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸೂರ್ಯ ಘರ್ ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೆ ಸಲ್ಲಿಸಿರುವ ಅರ್ಜಿಗಳನ್ನು ವಾರದೊಳಗೆ ವಿಲೇವಾರಿ ಮಾಡಬೇಕೆಂದು ಅವರು ಸೂಚಿಸಿದರು.
ಪ್ರತಿ 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಿ ವರದಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸುವಂತೆ ಸೂಚಿಸಿದ ಅವರು, ಮುಂದಿನ ತ್ರೈಮಾಸಿಕ ಸಭೆಯೊಳಗೆ ಯಾವುದೇ ಅರ್ಜಿಗಳು ಬಾಕಿ ಉಳಿಯದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ಬಳಿಕ 2026-27ನೇ ಸಾಲಿನ ಸಂಭಾವ್ಯ ಸಾಲ ಯೋಜನೆಯ ಪುಸ್ತಕವನ್ನು ಸಿಇಒ ಬಿಡುಗಡೆಗೊಳಿಸಿದರು.
ಸಭೆಯಲ್ಲಿ ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ವಿಕಾಸ ರಾಠೋಡ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಬಿ. ಸಿದ್ದಯ್ಯ, ಆರ್ಬಿಐ ವ್ಯವಸ್ಥಾಪಕ ಶೀಲ್ ಪ್ರಿಯಾ ಗೌತಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande