

ವಿಜಯಪುರ, 18 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ 137 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ೧೦ನೇ ತರಗತಿ ಪರೀಕ್ಷೆ ಪ್ರಾರಂಭವಾಗಿದ್ದು, ಪ್ರಥಮ ಭಾಷೆ ಪರೀಕ್ಷೆ ಶಾಂತಿಯುತವಾಗಿ ನಡೆಯಿತು. ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ನಗರದ ಶಾಂತಿನಿಕೇತನ ಹಾಗೂ ಲೋಯೆಲಾ ಶಾಲೆಗಳ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಯಾವುದೇ ಗೊಂದಲಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಧೈರ್ಯ ತುಂಬಿದರು. ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಮತ್ತು ನಿಯಮಾನುಸಾರ ನಡೆಸಬೇಕು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಮಹತ್ವದ ಹಂತವಾಗಿರುವುದರಿಂದ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ತಾಂತ್ರಿಕ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರಗಳು, ಪರೀಕ್ಷಾ ಕೇಂದ್ರಗಳ ವ್ಯವಸ್ಥೆ, ಇಂಟರ್ನೆಟ್ ಸೌಲಭ್ಯ, ಸಿಸಿಟಿವಿ ಕಾರ್ಯ ನಿರ್ವಹಣೆ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು. ಪರೀಕ್ಷಾ ಅವಧಿಯಲ್ಲಿ ಯಾವುದೇ ತಾಂತ್ರಿಕ ತೊಂದರೆ ಉಂಟಾಗದಂತೆ ಹಾಗೂ ಸಿಸಿಟಿವಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.
ವೈದ್ಯಕೀಯ ಸೌಲಭ್ಯ, ವಿದ್ಯಾರ್ಥಿಗಳ ಹಾಜರಾತಿ, ಆಸನ ವ್ಯವಸ್ಥೆ, ಮೂಲಭೂತ ಸೌಲಭ್ಯಗಳು ಹಾಗೂ ಪೊಲೀಸ್ ಭದ್ರತಾ ವ್ಯವಸ್ಥೆಯನ್ನೂ ಅವರು ಪರಿಶೀಲಿಸಿದರು. ವಿದ್ಯಾರ್ಥಿಗಳು ಆತಂಕವಿಲ್ಲದೆ, ಭಯಮುಕ್ತವಾಗಿ ಪರೀಕ್ಷೆ ಬರೆಯಲು ಅನುಕೂಲಕರ ವಾತಾವರಣ ಕಲ್ಪಿಸಬೇಕೆಂದು ಪರೀಕ್ಷಾ ಮೇಲ್ವಿಚಾರಕರಿಗೆ ತಿಳಿಸಿದರು. ಪರಿಶೀಲನೆ ವೇಳೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande