ಅಪೌಷ್ಠಿಕತೆ ಶೂನ್ಯಕ್ಕೆ ತರುವಂತೆ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ, 19 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು. ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗ
ಡಿಸಿ


ವಿಜಯಪುರ, 19 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅಪೌಷ್ಠಿಕತೆ ಹಾಗೂ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಲು ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ತಕ್ಷಣ ಒದಗಿಸಿ, ತೀವ್ರ ನಿಗಾ ವಹಿಸುವ ಮೂಲಕ ಜಿಲ್ಲೆಯಲ್ಲಿನ ಇಂತಹ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರುವ ಗುರಿಯೊಂದಿಗೆ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ಅಪೌಷ್ಠಿಕತೆ ನಿವಾರಣಾ ಕೇಂದ್ರಗಳಲ್ಲಿ ದಾಖಲಾಗುವ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಮಾಹಿತಿ ಸಂಗ್ರಹಿಸಿ ಸಮಗ್ರ ದಾಖಲೆ ಇಡಬೇಕು ಎಂದು ಸೂಚಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆ, ಸಮರ್ಪಕ ಪೌಷ್ಟಿಕ ಆಹಾರ ವಿತರಣೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಕಡ್ಡಾಯವಾಗಿ ಇರಬೇಕು. ಸಿಡಿಪಿಒಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರು ಈ ದಿಸೆಯಲ್ಲಿ ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡಿ, ವಿಶೇಷವಾಗಿ ಗ್ರಾಮೀಣ ಭಾಗದ ಅಂಗನವಾಡಿಗಳ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳಿಗೆ ಮಳೆ ಹಾಗೂ ಗಾಳಿಯಿಂದ ಹಾನಿಯಾಗುವ ಸಾಧ್ಯತೆ ಇದ್ದರೆ ಮುಂಚಿತವಾಗಿ ಪರಿಶೀಲಿಸಿ, ಅಂತಹ ಕೇಂದ್ರಗಳನ್ನು ಸುರಕ್ಷಿತ ಕಟ್ಟಡಗಳಿಗೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಮೂಲಭೂತ ಸೌಲಭ್ಯಗಳ ಕೊರತೆ ಇರುವ ಕೇಂದ್ರಗಳ ಸಮಸ್ಯೆಗಳ ಪಟ್ಟಿಯನ್ನು ಸಿದ್ಧಪಡಿಸಿ, ಸಂಬಂಧಿತ ಇಲಾಖೆಗಳ ಮೂಲಕ ಕ್ರಿಯಾಯೋಜನೆ ರೂಪಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.

ಅನಿಷ್ಠ ಪದ್ಧತಿಗಳಿಗೆ ಕಡಿವಾಣ ಹಾಕಲು ಸೂಚನೆ

ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಉಲ್ಲಂಘನೆ, ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಸೇರಿದಂತೆ ವಿವಿಧ ಅನಿಷ್ಠ ಪದ್ಧತಿಗಳನ್ನು ತಡೆಯಲು ಗ್ರಾಮ ಮಟ್ಟದಲ್ಲಿ ನಿರಂತರ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಪ್ರತಿ ತಿಂಗಳು ಕಾವಲು ಸಮಿತಿ ಸಭೆಗಳನ್ನು ನಡೆಸಿ ಮಕ್ಕಳ ರಕ್ಷಣಾ ಕಾನೂನುಗಳ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಯಮಿತವಾಗಿ ಸಭೆಗಳನ್ನು ಆಯೋಜಿಸಿ ಕಾನೂನು ಅರಿವು ಹೆಚ್ಚಿಸುವ ಕೆಲಸ ನಡೆಯಬೇಕು ಎಂದರು.

ಬಾಲ್ಯವಿವಾಹ ತಡೆ ವಿಚಾರದಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ನಿಲುವು ತಾಳಬೇಕು. ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡುಬಂದಲ್ಲಿ ಸಂಬಂಧಿಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.

ಗ್ರಾಮ ಮಟ್ಟದಲ್ಲಿ ಸಭೆಗಳನ್ನು ನಡೆಸುವುದರಿಂದ ಗ್ರಾಮಸ್ಥರಲ್ಲಿ ಕಾನೂನು ಅರಿವು ಹೆಚ್ಚಾಗಿ, ವಿವಿಧ ಅನಿಷ್ಠ ಪದ್ಧತಿಗಳ ಪ್ರಕರಣಗಳು ಇಳಿಮುಖವಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande