
ಬೆಂಗಳೂರು, 23 ಮಾರ್ಚ್ (ಹಿ.ಸ.):
ಆ್ಯಂಕರ್:ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.
ಕೇರಳ ಮೂಲದ ಖಾಸಗಿ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಸಮೀಪ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣ ನಾಶವಾಗಿದ್ದು, ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಕೇರಳಂ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್ (45), ಸಕೀರ್ (27) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa