
ಬಾಗಲಕೋಟೆ, 24 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆ–2026ರ ಹಿನ್ನೆಲೆಯಲ್ಲಿ ಐಹೊಳೆ ವ್ಯಾಪ್ತಿಯ ಒಟ್ಟು 23 ಬೂತ್ಗಳು ಹಾಗೂ 17 ಗ್ರಾಮಗಳ ಪ್ರಮುಖ ಕಾರ್ಯಕರ್ತರ ಸಭೆ ಐಹೊಳೆನಲ್ಲಿ ನಡೆಯಿತು.
ಸಭೆಯಲ್ಲಿ ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ ಅವರು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಭರ್ಜರಿ ಗೆಲುವು ತಂದುಕೊಡುವ ನಿಟ್ಟಿನಲ್ಲಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸಿ ಪಕ್ಷದ ಸಾಧನೆ ಹಾಗೂ ಯೋಜನೆಗಳನ್ನು ತಿಳಿಸಬೇಕು ಎಂದು ಅವರು ಕರೆ ನೀಡಿದರು.
ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಪ್ರತಿ ಗ್ರಾಮದಲ್ಲಿ ಪಕ್ಷದ ಪರ ವಾತಾವರಣ ನಿರ್ಮಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಸಭೆಯಲ್ಲಿ ಐಹೊಳೆ ಮಂಡಲದ ಮುಖಂಡರು, ಹುನಗುಂದ ಗ್ರಾಮೀಣ ವಿಸ್ತಾರಕರು ಹಾಗೂ ವಿವಿಧ ಗ್ರಾಮದ ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande