
ವಿಜಯಪುರ, 25 ಮಾರ್ಚ್ (ಹಿ.ಸ.)
ಆ್ಯಂಕರ್ : ಸ್ಮಶಾನ ಭೂಮಿ ದೊರೆಯುವುದು ಈಗ ಕಷ್ಟವಾಗುತ್ತಿರುವುದರಿಂದ ಸ್ಮಶಾನ ಭೂಮಿಗಳ ಒತ್ತುವರಿ ಸರ್ವೆ ನಡೆಸಿ, ಬೇಲಿ ಅಳವಡಿಸಿ ಹದ್ದುಬಸ್ತ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದೌರ್ಜನ್ಯ ನಿಯಂತ್ರಣ ಕಾಯ್ದೆ–1989ರಡಿ ರಚಿತವಾದ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಕೇವಲ ಸಮಸ್ಯೆಗಳನ್ನು ಕೇಳಿಸಿಕೊಂಡು ಹೋಗುವುದಲ್ಲ, ನಿಮ್ಮ ಹಂತದಲ್ಲೇ ಸಾಧ್ಯವಾದ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಮಶಾನ ಭೂಮಿ ಸಂಬಂಧಿತ ಸಮಸ್ಯೆ ಎಲ್ಲೆಲ್ಲಿ ಇದ್ದರೂ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತರಬೇಕು. ಸಭೆಯಲ್ಲಿ ಚರ್ಚೆಯಾದ ವಿಷಯಗಳು ಹಾಗೂ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥಪಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಸತಿ ನಿಲಯಗಳಲ್ಲಿ ಸ್ವಚ್ಛತೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದ ಅವರು, ಜಿಲ್ಲೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯುವವರಿಗೆ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಲು ಆರೋಗ್ಯ ಇಲಾಖೆಯಲ್ಲಿ ಹೆಲ್ಪ್ಲೈನ್ ಸ್ಥಾಪಿಸಿ ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಬೇಕು ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಮೀನಿನಲ್ಲಿ ವಿದ್ಯುತ್ ಕಂಬಗಳ ಎಲ್ಟಿ ವೈರ್ ಹಾಕಿ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ರೈತರಿಗೆ ತೊಂದರೆ ಆಗದಂತೆ ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ದೌರ್ಜನ್ಯ ಪ್ರಕರಣಗಳನ್ನು ಪಟ್ಟಿ ಮಾಡಿ ವಿಳಂಬ ಮಾಡದೇ ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು. ಇಂತಹ ಪ್ರಕರಣಗಳಿಗೆ ಸಂಬಂಧಿಸಿದ ಪರಿಹಾರ ಧನವನ್ನು ಬಾಕಿ ಉಳಿಸದೇ ತಕ್ಷಣ ಒದಗಿಸಬೇಕು ಎಂದರು. ಜೊತೆಗೆ ನಿಗದಿತ ಅವಧಿಯಲ್ಲಿ ಕುಂದುಕೊರತೆ ಸಭೆ ನಡೆಸಿ ಗ್ರಾಮೀಣ ಭಾಗಗಳಲ್ಲಿ ಅಸ್ಪೃಶ್ಯತೆ ನಿವಾರಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಚರ್ಚೆಯಾದ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ವೈಯಕ್ತಿಕವಾಗಿ ಅಧಿಕಾರಿಗಳ ಗಮನಕ್ಕೆ ತರುವ ಸಮಸ್ಯೆಗಳನ್ನೂ ಆದ್ಯತೆಯಿಂದ ಪರಿಹರಿಸಬೇಕು. ಸಭೆಯಲ್ಲಿ ಸದಸ್ಯರು ಪ್ರಸ್ತಾಪಿಸಿರುವ ವಿಷಯಗಳ ಕುರಿತು ಗಮನಹರಿಸಿ ಸಮಾಜ ಕಲ್ಯಾಣ ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಗೆ ಫಾಲೋಅಪ್ ಮಾಡಿ, ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಬ್ಯಾಂಕ್ ಸಹಾಯಧನ ಬಿಡುಗಡೆ ಮಾಡಬೇಕು. ವಿವಿಧ ಯೋಜನೆಗಳಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ ವಿಳಂಬವಿಲ್ಲದೆ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಹೆಸ್ಕಾಂ ಅಧಿಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಹಾಗೂ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande