
ವಿಜಯಪುರ, 25 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ನಗರದ ಮರಾಠಿ ವಿದ್ಯಾಲಯದಲ್ಲಿರುವ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಪರೀಕ್ಷಾ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುವಂತೆ ಹಾಗೂ ಯಾವುದೇ ಸಮಸ್ಯೆ ಉಂಟಾಗದಂತೆ ಅತ್ಯಂತ ಜಾಗ್ರತೆಯಿಂದ ಕಾರ್ಯನಿರ್ವಹಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯಗಳು, ಭದ್ರತಾ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಅಳವಡಿಸಿರುವ ಸಿಸಿಟಿವಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಎಲ್ಲಾ ವ್ಯವಸ್ಥೆಗಳು ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು ಹಾಗೂ ಕಟ್ಟುನಿಟ್ಟಿನ ಮೇಲ್ವಿಚಾರಣೆ ಇರಬೇಕು ಎಂದು ಸೂಚಿಸಿದರು.
ಸಮಯ ಪಾಲನೆಯನ್ನು ಕಡ್ಡಾಯವಾಗಿ ಅನುಸರಿಸಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಮತ್ತು ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande