

ಬಾಗಲಕೋಟೆ, 27 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ತಾಲ್ಲೂಕಿನ ಶೀಗೀಕೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಎಂ ಅವರ ನೇತೃತ್ವದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಸಂಗಪ್ಪ ಎಂ ಅವರು, ಪ್ರಜಾಪ್ರಭುತ್ವದ ಗಟ್ಟಿ ನಲೆಗೆ ಮತದಾನ ಅತ್ಯವಶ್ಯವಾಗಿದ್ದು, ಎಲ್ಲ ಅರ್ಹ ಮತದಾರರು ತಪ್ಪದೆ ಚುನಾವಣೆಯಲ್ಲಿ ತಮ್ಮ ಮತಹಕ್ಕನ್ನು ಚಲಾಯಿಸಬೇಕು ಎಂದು ಕರೆ ನೀಡಿದರು.
ಮತದಾನವು ಪ್ರತಿಯೊಬ್ಬ ನಾಗರಿಕನ ಹಕ್ಕು ಹಾಗೂ ಕರ್ತವ್ಯವಾಗಿದ್ದು, ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಗ್ರಾಮದ ಮುಖ್ಯ ವೃತ್ತದಲ್ಲಿ ಗ್ರಾಮಸ್ಥರನ್ನು ಸೇರಿಸಿದ ಜಿಲ್ಲಾಧಿಕಾರಿಗಳು ಎಲ್ಲರಿಗೂ ಕೈ ಮೇಲೆ ಎತ್ತಿ ಮತದಾನ ಮಾಡಲೇಬೇಕು ಎಂದು ಪ್ರತಿಜ್ಞೆ ಮಾಡಿಸಿದರು. ಜೊತೆಗೆ ಗ್ರಾಮಸ್ಥರಿಂದ ಪ್ರತಿಜ್ಞಾ ಸಾಲುಗಳನ್ನು ಸ್ವತಃ ಜಿಲ್ಲಾಧಿಕಾರಿ ಹೇಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಪಂ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande