
ಪುತ್ತೂರು, 28 ಮಾರ್ಚ್ (ಹಿ.ಸ.):
ಆ್ಯಂಕರ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ-ಕೇರಳ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಅಶೋಕ ರೈ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ಸೇತುವೆ ನಿರ್ಮಾಣದ ಅಗತ್ಯತೆ, ಸಂಪರ್ಕ ಸುಧಾರಣೆ ಹಾಗೂ ಜನಸಾಮಾನ್ಯರಿಗೆ ಆಗುವ ಅನುಕೂಲತೆಗಳ ಕುರಿತು ಸಚಿವರೊಂದಿಗೆ ಚರ್ಚಿಸಿದರು.
ಶಿರಿಯಾ ನದಿ ಮೇಲೆ ಸೇತುವೆ ನಿರ್ಮಾಣವಾದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವೆ ಸಂಪರ್ಕ ಸುಗಮವಾಗುವ ಜೊತೆಗೆ ವ್ಯಾಪಾರ, ಶಿಕ್ಷಣ ಹಾಗೂ ಆರೋಗ್ಯ ಸೇವೆಗಳಿಗೂ ಹೆಚ್ಚಿನ ಅನುಕೂಲತೆ ಲಭ್ಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಸ್ಥಳೀಯರು ಈ ಯೋಜನೆ ಶೀಘ್ರ ಅನುಷ್ಠಾನಗೊಳ್ಳಬೇಕು ಎಂದು ಮನವಿ ಮಾಡಿದ್ದು, ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa