







ಬಳ್ಳಾರಿ, 28 ಮಾರ್ಚ್ (ಹಿ.ಸ.)
ಆ್ಯಂಕರ್: ಆರೋಗ್ಯ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಬಹಳ ಮುಖ್ಯವಾದದ್ದು. ಶಾರೀರಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯದ ಸಮತೋಲನವೂ ಮುಖ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನ್ಯಾಯಾಲಯದ ಸಿಬ್ಬಂದಿಗಳಿಗಾಗಿ ಶನಿವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾಗ ಮಾತ್ರ ನಾವು ಯಾವುದೇ ಕೆಲಸವನ್ನು ಉತ್ತಮ ರೀತಿಯಲ್ಲಿ ಮಾಡಲು ಸಾಧ್ಯವಾಗುತ್ತದೆ ಎಂದರು.
ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಮಹಿಳೆಯರು ಸದಾ ಮನೆಯ ಕೆಲಸ ಅಥವಾ ಕಚೇರಿಯ ಕೆಲಸಗಳಲ್ಲಿ ನಿರತರಾಗಿರುತ್ತಾರೆ. ಇದರಿಂದಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅವರಿಗೆ ಕಷ್ಟವಾಗುತ್ತಿದೆ ಎಂದರಲ್ಲದೇ, ಇಂತಹ ಶಿಬಿರಗಳು ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಉತ್ತಮ ವೇದಿಕೆಯಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು.
ಶಿಬಿರದಲ್ಲಿ ಭಾಗವಹಿಸಿರುವ ನುರಿತ ವೈದ್ಯರಿಂದ ಮಹಿಳೆಯರು ಸೂಕ್ತ ಸಲಹೆ, ಸೂಚನೆ ಹಾಗೂ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು ಮತ್ತು ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಶಿಬಿರ ಆಯೋಜನಕ್ಕೆ ಅನುವು ಮಾಡಿಕೊಟ್ಟ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ಪ್ರಮೋದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ, ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., ಪ್ರಿನ್ಸಿಪಲ್ ಕೌಟುಂಬಿಕ ನ್ಯಾಯಾಧೀಶರಾದ ವೆಂಕಟೇಶ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಇಬ್ರಾಹಿಂ ಎಂ.ಮುಜಾವರ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶರಾದ ನಾಗೇಶ್ ನಾಯ್ಕ, 1ನೇ ಅಪರ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶರಾದ ಸಿದ್ದಲಿಂಗಯ್ಯ ಗಂಗಾಧರ ಮಠ, 3ನೇ ಅಪರ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶರಾದ ಮುದುಕಪ್ಪ ಒಡನ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಅಧಿಕಾರಿ-ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್