
ಚಿತ್ರದುರ್ಗ, 30 ಮಾರ್ಚ್ (ಹಿ.ಸ.):
ಆ್ಯಂಕರ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ 29ನೇ ಕಂತಿನ ಹಣ ಬಿಡುಗಡೆಗೊಂಡಿದ್ದು, ಮುಂದಿನ ಎರಡು–ಮೂರು ದಿನಗಳಲ್ಲಿ ಜಿಲ್ಲೆಯ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಒಟ್ಟು 3,88,341 ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದ್ದು, ಈ ಕಂತಿಗಾಗಿ ಸರ್ಕಾರವು ರೂ.77,66,82,000 ಬಿಡುಗಡೆ ಮಾಡಿದೆ.
ಮಹಿಳೆಯರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ರಾಜ್ಯದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಕುಟುಂಬದ ಮುಖ್ಯ ಮಹಿಳೆಗೆ ಪ್ರತಿ ತಿಂಗಳು ರೂ.2000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ಮೂಲಕ ಈ ಯೋಜನೆ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಭದ್ರತೆಯನ್ನು ಒದಗಿಸಿದೆ.
ಯೋಜನೆಯ ಮುಖ್ಯ ಉದ್ದೇಶ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ರೂಪಿಸುವುದಾಗಿದೆ. ಮನೆ ನಿರ್ವಹಣೆಯ ಹೊಣೆ ಹೊತ್ತಿರುವ ಮಹಿಳೆಯರಿಗೆ ಸರ್ಕಾರದಿಂದ ದೊರೆಯುತ್ತಿರುವ ನೇರ ನೆರವು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಹಿಳೆಯರು ಈ ನೆರವನ್ನು ಮನೆಯ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸಣ್ಣ ಉಳಿತಾಯಕ್ಕಾಗಿ ಬಳಸುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಆರಂಭವಾದ ಬಳಿಕ ಮಹಿಳೆಯರ ಜೀವನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದ್ದು, ಹಲವಾರು ಕುಟುಂಬಗಳಲ್ಲಿ ಮಹಿಳೆಯರ ಮಾತಿಗೆ ಹೆಚ್ಚಿನ ಗೌರವ ದೊರಕುತ್ತಿದೆ. ಆರ್ಥಿಕ ಸ್ವಾತಂತ್ರ್ಯದ ಮೂಲಕ ಅವರು ತಮ್ಮ ಅಗತ್ಯಗಳನ್ನು ಸ್ವತಂತ್ರವಾಗಿ ಪೂರೈಸಿಕೊಳ್ಳುತ್ತಿದ್ದಾರೆ.
ಒಟ್ಟಿನಲ್ಲಿ, ಈ ಯೋಜನೆ ಕೇವಲ ಹಣಕಾಸಿನ ನೆರವಷ್ಟೇ ಅಲ್ಲದೆ, ಮಹಿಳೆಯರ ಗೌರವ ಮತ್ತು ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಸಾಮಾಜಿಕ ಕ್ರಾಂತಿಯಾಗಿ ರೂಪುಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಹಿಳೆಯರ ಬದುಕಿನಲ್ಲಿ ಬದಲಾವಣೆ ತರಲಿದೆ ಎಂದು ಆರ್. ಶಿವಣ್ಣ ಅಭಿಪ್ರಾಯಪಟ್ಟಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa