ಮಕ್ಕಳ ರಕ್ಷಣಾ ನೀತಿ ಸಮರ್ಪಕ ಅನುಷ್ಠಾನ ಕಡ್ಡಾಯ:ಕೆ.ಟಿ.ತಿಪ್ಪೇಸ್ವಾಮಿ
ಚಿತ್ರದುರ್ಗ, 05 ಮಾರ್ಚ್ (ಹಿ.ಸ.): ಆ್ಯಂಕರ್: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016’ ಜಾರಿಗೆ ಬಂದು 10 ವರ್ಷಗಳೇ ಕಳೆದಿದ್ದರೂ, ಅನೇಕ ಶಿಕ್ಷಣ ಸಂಸ್ಥೆಗಳಲ್ಲಿ ಸರಿಯಾಗಿ ಅನುಷ್ಠಾನಗೊಂಡಿಲ್ಲದಿರುವುದು ವಿಷಾಧನೀಯ ಸಂಗತಿ. ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 18 ವರ್ಷದೊಳಗಿನ ಮಕ್ಕಳ ಸುರಕ್ಷತ
Seminar


ಚಿತ್ರದುರ್ಗ, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016’ ಜಾರಿಗೆ ಬಂದು 10 ವರ್ಷಗಳೇ ಕಳೆದಿದ್ದರೂ, ಅನೇಕ ಶಿಕ್ಷಣ ಸಂಸ್ಥೆಗಳಲ್ಲಿ ಸರಿಯಾಗಿ ಅನುಷ್ಠಾನಗೊಂಡಿಲ್ಲದಿರುವುದು ವಿಷಾಧನೀಯ ಸಂಗತಿ. ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 18 ವರ್ಷದೊಳಗಿನ ಮಕ್ಕಳ ಸುರಕ್ಷತೆಗಾಗಿ ಜಾರಿಗೆ ತರಲಾಗಿರುವ ಮಕ್ಕಳ ರಕ್ಷಣಾ ನೀತಿ ಕಡ್ಡಾಯವಾಗಿ ಅನುಷ್ಠಾನಗೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು ತಿಳಿಸಿದರು.

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ-2023) ಹಾಗೂ ಮಕ್ಕಳ ರಕ್ಷಣೆ ಕಾಯ್ದೆ ಕುರಿತು ಡಿಪ್ಲೊಮೋ, ಪಾಲಿಟೆಕ್ನಿಕ್, ಐಟಿಐ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಪ್ರಾಂಶುಪಾಲರಿಗೆ ಒಂದು ದಿನದ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ವಿವಿಧ ಜಿಲ್ಲೆಗಳ ಐಟಿಐ, ಪ್ಯಾರಾಮೆಡಿಕಲ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಭೇಟಿ ನೀಡಿದಾಗ, ಮಕ್ಕಳ ರಕ್ಷಣಾ ನೀತಿಯ ಬಗ್ಗೆ ಅನೇಕ ಪ್ರಾಂಶುಪಾಲರಿಗೆ ಮಾಹಿತಿಯೇ ಇಲ್ಲದಿರುವುದು ಗಮನಕ್ಕೆ ಬಂದಿದೆ. ಈ ರಕ್ಷಣಾ ನೀತಿಯು ಕೇವಲ ಸರ್ಕಾರಿ ಶಾಲೆಗಳಿಗೆ ಮಾತ್ರವಲ್ಲದೆ, ಅನುದಾನಿತ, ಅನುದಾನರಹಿತ ಸಂಸ್ಥೆಗಳು ಹಾಗೂ ಖಾಸಗಿ ಟ್ಯೂಷನ್ ಕೇಂದ್ರಗಳಿಗೂ ಅನ್ವಯಿಸುತ್ತದೆ. ಪ್ರತಿಯೊಂದು ಶಿಕ್ಷಣ ಸಂಸ್ಥೆಯು ಕಡ್ಡಾಯವಾಗಿ ‘ಮಕ್ಕಳ ರಕ್ಷಣಾ ಸಮಿತಿ'ಯನ್ನು ರಚಿಸಬೇಕು ಎಂದು ತಿಳಿಸಿದರು.

ಈ ಹಿಂದೆ ಕೇವಲ ಶಿಕ್ಷಣ ಇಲಾಖೆಗೆ ಸೀಮಿತವಾಗಿದ್ದ ಮಕ್ಕಳ ರಕ್ಷಣಾ ನೀತಿ, ಈಗ ಆಯೋಗದ ಕ್ರಮದಿಂದಾಗಿ 11 ವಿವಿಧ ಇಲಾಖೆಗಳ ಮೂಲಕ 30 ಪುಟಗಳ ಸಮಗ್ರ ಸುತ್ತೋಲೆಯಾಗಿ ಹೊರಬಂದಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಮತ್ತು ಅವರಿಗೆ ಸುರಕ್ಷಿತ ವಾತಾವರಣ ಒದಗಿಸಲು ಅಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಪ್ರಭಾವದಿಂದಾಗಿ ಮಕ್ಕಳ ಸಮಸ್ಯೆಗಳು ಜಟಿಲವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರೂಪಿಸಲಾಗಿರುವ ಪಾಲಿಸಿಗಳನ್ನು ಕೇವಲ ದಾಖಲೆಗೆ ಸೀಮಿತಗೊಳಿಸದೆ, ಪ್ರಾಯೋಗಿಕವಾಗಿ ಜಾರಿಗೆ ತರುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್ ಮಾತನಾಡಿ, 18 ವರ್ಷದೊಳಗಿನ ಎಲ್ಲಾ ಮಕ್ಕಳ ಸುರಕ್ಷತೆಯು ಶಿಕ್ಷಣ ಸಂಸ್ಥೆಗಳ ಆದ್ಯತೆಯಾಗಬೇಕು. ವಿಶೇಷವಾಗಿ ವಿದ್ಯಾರ್ಥಿನಿಲಯ ಮತ್ತು ಕಾಲೇಜುಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಇತ್ತೀಚೆಗೆ ಭರಮಸಾಗರದ ವಿದ್ಯಾರ್ಥಿಯೊಬ್ಬನ ಆತ್ಮಹತ್ಯೆ ಪ್ರಕರಣ ಉಲ್ಲೇಖಿಸಿ, ಅನಾಹುತಗಳು ಸಂಭವಿಸಿದ ನಂತರ ಎಚ್ಚೆತ್ತುಕೊಳ್ಳುವ ಬದಲು, ಮುನ್ನೆಚ್ಚರಿಕೆಯಾಗಿ ಮಕ್ಕಳ ರಕ್ಷಣಾ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಇರುವ ಸಮಿತಿಗಳು ಕೇವಲ ಕಡತಕ್ಕೆ ಸೀಮಿತವಾಗದೆ, ನಿಯಮಿತವಾಗಿ ಸಭೆ ನಡೆಸಿ, ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಜಗದೀಶ್, ರಂಗನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎ.ಎಂ.ವೀಣಾ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಡಿಪ್ಲೊಮೋ, ಪಾಲಿಟೆಕ್ನಿಕ್, ಐಟಿಐ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಪ್ರಾಂಶುಪಾಲರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande