
ಬೆಂಗಳೂರು, 06 ಮಾರ್ಚ್ (ಹಿ.ಸ.):
ಆ್ಯಂಕರ್:ಬೆಂಗಳೂರು ಕೇವಲ ಒಂದು ನಗರವಷ್ಟೇ ಅಲ್ಲ, ಅಸಂಖ್ಯಾತ ಕನಸುಗಳ ನೆಲೆಬೀಡು. ನಾಡಪ್ರಭು ಕೆಂಪೇಗೌಡರ ಆಡಳಿತದಿಂದ ಹಿಡಿದು ಇಂದಿನ ಸ್ಟಾರ್ಟ್‌ಅಪ್ ಕ್ರಾಂತಿಯವರೆಗೆ ಈ ನಗರವು ತನ್ನದೇ ಆದ ವೈಶಿಷ್ಟತೆಯನ್ನು ಹೊಂದಿದೆ. ಬೆಂಗಳೂರನ್ನು ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರವನ್ನಾಗಿ ರೂಪಿಸುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ 2026-27ನೇ ಸಾಲಿನ ಬಜೆಟ್ ಭಾಷಣದಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಹಲವು ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿದೆ.
ನಗರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1,255 ಕೋಟಿ ರೂ.ಗಳ ವೆಚ್ಚದಲ್ಲಿ ವಾರ್ಡ್ ರಸ್ತೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಇದಲ್ಲದೆ, 1,700 ಕೋಟಿ ರೂ.ಗಳ ಮೊತ್ತದಲ್ಲಿ 158 ಕಿಲೋಮೀಟರ್ ಉದ್ದದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಜಾರಿಗೆ ತರಲಾಗುತ್ತದೆ. ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು 1,936 ಕೋಟಿ ರೂ. ವೆಚ್ಚದಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲಾಗುವುದು ಎಂದು ಘೋಷಿಸಿದರು.
ನಗರದ ಪ್ರಮುಖ ಸಂಚಾರ ದಟ್ಟಣೆ ಪ್ರದೇಶಗಳಲ್ಲಿ ಒಂದಾದ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೃಷ್ಣರಾಜಪುರಂ ಮೆಟ್ರೋ ನಿಲ್ದಾಣ ವರೆಗೆ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸುವ 450 ಕೋಟಿ ರೂ.ಗಳ ಯೋಜನೆಯನ್ನು ಸಹ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.
ಇದರ ಜೊತೆಗೆ, ನಗರದಲ್ಲಿ ಮಳೆಯ ಸಮಯದಲ್ಲಿ ಉಂಟಾಗುವ ಸಮಸ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ 273 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ರಾಜಕಾಲುವೆಗಳ ಮೇಲ್ದರ್ಜೆಗೇರಿಸುವುದು ಹಾಗೂ ಕೆರೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಈ ಯೋಜನೆಗಳ ಮೂಲಕ ಬೆಂಗಳೂರಿನ ಮೂಲಸೌಕರ್ಯವನ್ನು ಬಲಪಡಿಸಿ, ನಗರವನ್ನು ಜಾಗತಿಕ ಮಟ್ಟದ ವಾಸಯೋಗ್ಯ ನಗರವನ್ನಾಗಿ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa