ಬಜೆಟ್ನಲ್ಲಿ ಧಾರವಾಡ ಜಿಲ್ಲೆಗೆ ಬಂಪರ್ ಕೊಡುಗೆ:ಸಚಿವ ಲಾಡ್
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್‌ನಲ್ಲಿ ಧಾರವಾಡ ಜಿಲ್ಲೆಗೆ ಹಲವು ಯೋಜನೆ, ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಈ ಬಾರಿಯ ಆಯವ್ಯಯದಲ್ಲಿ ಜಿಲ್ಲೆಗೆ ಬಂಪರ್‌ ಕೊಡುಗೆ ದೊರೆತಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾ
ಬಜೆಟ್ನಲ್ಲಿ ಧಾರವಾಡ ಜಿಲ್ಲೆಗೆ ಬಂಪರ್ ಕೊಡುಗೆ:ಸಚಿವ ಲಾಡ್


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್‌ನಲ್ಲಿ ಧಾರವಾಡ ಜಿಲ್ಲೆಗೆ ಹಲವು ಯೋಜನೆ, ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಈ ಬಾರಿಯ ಆಯವ್ಯಯದಲ್ಲಿ ಜಿಲ್ಲೆಗೆ ಬಂಪರ್‌ ಕೊಡುಗೆ ದೊರೆತಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಶಿಕ್ಷಣ, ಕಾನೂನು, ಆರೋಗ್ಯ, ಕಾರ್ಮಿಕ, ನೀರಾವರಿ ಸೇರಿದಂತೆ ಬಹುತೇಕ ಇಲಾಖೆಗಳ ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ.

ಧಾರವಾಡ, ನವಲಗುಂದ ಹಾಗೂ ಕುಂದಗೋಳ ತಾಲೂಕುಗಳಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಧಾರವಾಡದಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಸ್ಥಾಪನೆಗೆ ನಿರ್ಧರಿಸಲಾಗಿದೆ. ಐಐಟಿ ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ₹5 ಕೋಟಿ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ ಎಐ ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯ ಒದಗಿಸಲು ಈ ಬಾರಿಯ ಬಜೆಟ್‌ನಲ್ಲಿ ತೀರ್ಮಾನಿಸಲಾಗಿದೆ.

ಇನ್ನು ಕೆಂಪಕೆರೆ ತುಂಬಿಸುವ ಯೋಜನೆಗೆ ಹಸಿರು ನಿಶಾನೆ ದೊರೆತಿದೆ. ಧಾರವಾಡದ ಡಿಮ್ಹಾನ್ಸ್‌ ಸಹಯೋಗದೊಂದಿಗೆ ʻಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ' ಪ್ರಾರಂಭಿಸಲು ತೀರ್ಮಾನಿಸಲಾಗಿದೆ‌. ಹುಬ್ಬಳ್ಳಿ-ಧಾರವಾಡದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸಂಖ್ಯಾಬಲದ 10 ವಸತಿ ನಿಲಯ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ʻಧಾರವಾಡ ಕೈಗಾರಿಕಾ ನೋಡ್‌ʼಗೆ ಸಂಬಂಧಿಸಿದಂತೆ 1,000 ಎಕರೆಯನ್ನು ಭೂಸ್ವಾಧೀನ ಮಾಡಲು ₹ 600 ಕೋಟಿ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಧಾರವಾಡ ಮಹಾನಗರದಲ್ಲಿ ಅತ್ಯಾಧುನಿಕ ಮೂಲಸೌಕರ್ಯವನ್ನು ಒಳಗೊಂಡ ಕೌಶಲ್ಯ ತರಬೇತಿ ಅಕಾಡೆಮಿಯನ್ನು ₹200 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

‌₹200 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ರಾಜ್ಯದ ಮೊಟ್ಟ‌ಮೊದಲ ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆಯಾಗಲಿದೆ. ಕಲಘಟಗಿ ತಾಲೂಕಿನ ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.

ಧಾರವಾಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸ್ಪಂದನೆ ಸಿಕ್ಕಿದೆ. ಹಿಂದುಳಿದವರು, ಮಹಿಳೆಯರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಠ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆ ಒತ್ತು ಕೊಟ್ಟಿದ್ದಾರೆ. ಬಜೆಟ್‌ನಲ್ಲಿ ಜಿಲ್ಲೆಗೆ ಹೊಸ ಯೋಜನೆ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande