ಸರ್ಕಾರಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಗದಗ, 06 ಮಾರ್ಚ್ (ಹಿ.ಸ.) ಆ್ಯಂಕರ್: ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆಯನ್ನು ಹಲವು ತಿಂಗಳುಗಳಿಂದ ಮುಂದಿಟ್ಟಿದ್ದರೂ ಸಾರಿಗೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸರ್ಕಾರಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ
ಫೋಟೋ


ಗದಗ, 06 ಮಾರ್ಚ್ (ಹಿ.ಸ.)

ಆ್ಯಂಕರ್: ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆಯನ್ನು ಹಲವು ತಿಂಗಳುಗಳಿಂದ ಮುಂದಿಟ್ಟಿದ್ದರೂ ಸಾರಿಗೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸರ್ಕಾರಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಸಂಜೆ ನಡೆದಿದೆ.

ಶಿರಹಟ್ಟಿ ತಾಲೂಕಿನ ಹರಿಪುರ ಗ್ರಾಮದ ಕಾಲೇಜು ವಿದ್ಯಾರ್ಥಿಗಳು ಪ್ರತಿದಿನವೂ ಶಿರಹಟ್ಟಿ ಸೇರಿದಂತೆ ಸುತ್ತಮುತ್ತಲಿನ ಪಟ್ಟಣಗಳಿಗೆ ಶಿಕ್ಷಣಕ್ಕಾಗಿ ತೆರಳಬೇಕಾಗುತ್ತದೆ. ಆದರೆ ಹರಿಪುರ ಗ್ರಾಮದಲ್ಲಿ ಸರ್ಕಾರಿ ಬಸ್ ನಿಲುಗಡೆ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಹಲವು ಕಿಲೋಮೀಟರ್ ದೂರ ನಡೆದು ಹೋಗಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಸ್ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿದ್ದರು.

ವಿದ್ಯಾರ್ಥಿಗಳ ಪ್ರಕಾರ, ಸುಮಾರು ಆರು ತಿಂಗಳ ಹಿಂದೆಲೇ ಹರಿಪುರ ಗ್ರಾಮದಲ್ಲಿ ಬಸ್ ನಿಲುಗಡೆ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಕೆಲವೊಮ್ಮೆ ಬಸ್ ಬಂದರೂ ಚಾಲಕರು ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಬಸ್ ನಿಲ್ಲಿಸದೇ ನೇರವಾಗಿ ಮುಂದಕ್ಕೆ ಸಾಗುತ್ತಿರುವುದರಿಂದ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಈ ನಿರ್ಲಕ್ಷ್ಯದ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು ಶಿರಹಟ್ಟಿ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ನ್ನು ತಡೆದು ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ಸಾರಿಗೆ ಇಲಾಖೆಯ ವಿರುದ್ಧ ಧಿಕ್ಕಾರ ಕೂಗುತ್ತ ತಮ್ಮ ಆಕ್ರೋಶ ಹೊರಹಾಕಿದರು. “ಹರಿಪುರದಲ್ಲಿ ಬಸ್ ನಿಲ್ಲಿಸಬೇಕು”, “ವಿದ್ಯಾರ್ಥಿಗಳಿಗೆ ನ್ಯಾಯ ಕೊಡಬೇಕು” ಎಂಬ ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು.

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು ಆಗಮಿಸಿದರು. ಈ ವೇಳೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಹಲವು ತಿಂಗಳಿಂದ ಮನವಿ ಸಲ್ಲಿಸಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಪ್ರತಿದಿನ ಕಾಲೇಜಿಗೆ ಹೋಗಲು ಕಷ್ಟಪಡಬೇಕಾದ ಪರಿಸ್ಥಿತಿ ಎದುರಾಗುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ಸಮಸ್ಯೆಯನ್ನು ವಿವರಿಸಿದರು.

ಸ್ಥಳೀಯರು ಕೂಡ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಹರಿಪುರ ಗ್ರಾಮದಲ್ಲಿ ಬಸ್ ನಿಲುಗಡೆ ವ್ಯವಸ್ಥೆ ಮಾಡುವುದು ಅಗತ್ಯವಾಗಿದೆ ಎಂದು ಒತ್ತಾಯಿಸಿದರು. ಗ್ರಾಮದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪ್ರತಿದಿನ ಸಂಚರಿಸುತ್ತಿದ್ದು, ಬಸ್ ನಿಲ್ಲಿಸದಿರುವುದು ಅವರ ಶಿಕ್ಷಣಕ್ಕೆ ಅಡ್ಡಿಯಾಗುತ್ತಿದೆ ಎಂದು ಅವರು ಹೇಳಿದರು.

ಅಂತಿಮವಾಗಿ ಅಧಿಕಾರಿಗಳು ವಿದ್ಯಾರ್ಥಿಗಳ ಮನವಿಯನ್ನು ಪರಿಶೀಲಿಸಿ ಹರಿಪುರ ಗ್ರಾಮದಲ್ಲಿ ಬಸ್ ನಿಲುಗಡೆ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅಧಿಕಾರಿಗಳ ಭರವಸೆಯ ನಂತರ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

ಈ ಘಟನೆ ಕೆಲಕಾಲ ಶಿರಹಟ್ಟಿ ಪಟ್ಟಣದಲ್ಲಿ ಸಂಚಾರ ದಟ್ಟಣೆಗೆ ಕಾರಣವಾದರೂ ನಂತರ ಪರಿಸ್ಥಿತಿ ಸಹಜಗೊಂಡಿತು. ವಿದ್ಯಾರ್ಥಿಗಳ ಬೇಡಿಕೆಗೆ ಸಾರಿಗೆ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande