
ಧಾರವಾಡ, 07 ಮಾರ್ಚ್ (ಹಿ.ಸ.):
ಆ್ಯಂಕರ್:
ರೊಟ್ಟಿ ಅಂಗಡಿಗೆ ಪರವಾನಿಗೆ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ.
ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ವಲಯ–1 ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಹೀನಾ ಕೌಸರ್ ಅವರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಮಾಳೆಪ್ಪ ತಳವಾರ ಎಂಬುವರು ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ಪಡೆಯಲು ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಲೈಸೆನ್ಸ್ ನೀಡಲು ಹೀನಾ ಕೌಸರ್ ಅವರು 4,500 ರೂ. ಲಂಚದ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ.
ಈ ಮೊದಲು ಅವರು ಮಾಳೆಪ್ಪ ತಳವಾರರಿಂದ ಮುಂಗಡವಾಗಿ 1,000 ರೂ. ಸ್ವೀಕರಿಸಿದ್ದಾಗಿ ತಿಳಿದುಬಂದಿದೆ. ಉಳಿದ 3,500 ರೂ. ಹಣವನ್ನು ಇಂದು (ಮಾರ್ಚ್ 7) ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ನಡೆಸಲಾಗಿದೆ. ಪ್ರಕರಣ ಸಂಬಂಧ ಅಧಿಕಾರಿ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa