
ಗದಗ, 08 ಮಾರ್ಚ್ (ಹಿ.ಸ.)
ಆ್ಯಂಕರ್:- ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡತನವನ್ನು ಬೇರು ಸಮೇತ ಕಿತ್ತೊಗೆಯುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಹಕ್ಕುಗಳಾಗಿ ಪರಿಗಣಿಸಲ್ಪಡುವಂತಹ ಕಾನೂನು ರೂಪುಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರು ಹೇಳಿದರು.
ಗದಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಭಾನುವಾರ ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ ಹಾಗೂ ಸ್ವಾತಂತ್ರ್ಯ ದೊರಕಬೇಕು ಎಂದು ಬಸವಣ್ಣನವರು ಹೋರಾಟ ನಡೆಸಿದರು. ಶ್ರೇಣೀಕೃತ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ದೊರಕದ ಹಿನ್ನೆಲೆ ಅದನ್ನು ಸರಿಪಡಿಸಲು ತಮ್ಮ ಜೀವನವನ್ನೇ ಬಸವಣ್ಣನವರು ಮುಡಿಪಾಗಿಟ್ಟರು ಎಂದು ಹೇಳಿದರು.
ರಾಜಕೀಯವಾಗಿ ಪಂಚಾಯತ್ ವ್ಯವಸ್ಥೆಯಲ್ಲಿ 50% ಮೀಸಲಾತಿ ನೀಡುವುದರ ಮೂಲಕ ಮಹಿಳೆಯರು ಆಡಳಿತ ಹಾಗೂ ಅಧಿಕಾರವನ್ನು ಸಮರ್ಥವಾಗಿ ನಿರ್ವಹಿಸಬಲ್ಲರು ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಎಚ್ ಕೆ ಪಾಟೀಲ ಅವರು ತಿಳಿಸಿದರು.
ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬಹುಕಾಲ ಸಮರ್ಥವಾಗಿ ಆಡಳಿತ ನಡೆಸಿದ್ದಾರೆ. ಇಂದು ಪ್ರತಿ ಗ್ರಾಮದಲ್ಲೂ ಇಂದಿರಾ ಗಾಂಧಿಯಂತಹ ಶಕ್ತಿಯುತ ಮಹಿಳೆಯರು ಇದ್ದಾರೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅವರು ಮಾತನಾಡಿ, ಮಹಿಳೆಯರನ್ನು ಮಾತೃಭೂಮಿ ಎಂದು ಸಂಬೋಧಿಸುವ ಮೂಲಕ ಗೌರವಿಸುವ ಸಂಸ್ಕೃತಿ ನಮ್ಮದಾಗಿದೆ.
ವಿಶ್ವದಾದ್ಯಂತ ಮಹಿಳೆಯರಿಗೆ ಮಹತ್ವದ ಸ್ಥಾನಮಾನ ನೀಡಲಾಗುತ್ತಿದೆ. ಮಹಿಳೆ ಸಮಾಜದಲ್ಲಿ ಹಲವಾರು ರೂಪಗಳಲ್ಲಿ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾಳೆ ಎಂದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 17 ವರ್ಷಗಳ ಕಾಲ ದೇಶವನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ಮಹಿಳೆಯರಲ್ಲಿ ಅಗಾಧ ಶಕ್ತಿ ಅಡಗಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಿದೆ. ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.
2023ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಗೆ ಮಹಿಳೆಯರು ಪ್ರಮುಖ ಕಾರಣರಾಗಿದ್ದಾರೆ. ಇದಕ್ಕಾಗಿ ಮಹಿಳೆಯರ ಕಲ್ಯಾಣಕ್ಕೆ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಅವು ನಿರಂತರವಾಗಿ ಮುಂದುವರಿಯುತ್ತವೆ. ರಾಜ್ಯದಲ್ಲಿ ಸುಮಾರು 1.20 ಕೋಟಿ ಕುಟುಂಬಗಳ ಆರ್ಥಿಕ ಅಭಿವೃದ್ಧಿಗೆ ಈ ಯೋಜನೆಗಳು ಸಹಾಯಕವಾಗಿವೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಂದ ದೊರಕಿದ ಪ್ರಯೋಜನ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರದ ಮೂಲಕ ತಮ್ಮ ಅಭಿಪ್ರಾಯಗಳನ್ನು ತಿಳಿಸಬೇಕು ಎಂದು ಶಾಸಕ ಜಿ ಎಸ್ ಪಾಟೀಲ ಮಹಿಳೆಯರಿಗೆ ಮನವಿ ಮಾಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಮಹಿಳೆ ಮಗಳಾಗಿ, ಸಹೋದರಿಯಾಗಿ, ಹೆಂಡತಿಯಾಗಿ, ತಾಯಿಯಾಗಿ, ಸೊಸೆಯಾಗಿ, ಅತ್ತೆಯಾಗಿ ಹಾಗೂ ಅಜ್ಜಿಯಾಗಿ ಹಲವು ಹೊಣೆಗಾರಿಕೆಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾಳೆ ಎಂದು ಹೇಳಿದರು.
ಚುನಾವಣೆಗೂ ಮೊದಲು ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳೊಳಗೆ ಜಾರಿಗೆ ತಂದಿದೆ. ಗದಗ ಜಿಲ್ಲೆಗೆ ಗೃಹಲಕ್ಷ್ಮೀ ಯೋಜನೆಯಡಿ 1135 ಕೋಟಿ ರೂ., ಅನ್ನಭಾಗ್ಯ ಯೋಜನೆಯಡಿ 216 ಕೋಟಿ ರೂ., ಶಕ್ತಿ ಯೋಜನೆಯಡಿ 475 ಕೋಟಿ ರೂ., ಯುವನಿಧಿ ಯೋಜನೆಯಡಿ 15 ಕೋಟಿ ರೂ. ಸೇರಿದಂತೆ ಒಟ್ಟು 2130 ಕೋಟಿ ರೂ.ಗಳ ಅನುದಾನ ಗ್ಯಾರಂಟಿ ಯೋಜನೆಗಳ ಮೂಲಕ ಬಂದಿದೆ ಎಂದು ಮಾಹಿತಿ ನೀಡಿದರು.
ಈ ಯೋಜನೆಗಳಿಂದ ಮಹಿಳೆಯರ ವಾರ್ಷಿಕ ತಲಾ ಆದಾಯವು 2 ಲಕ್ಷ ರೂ.ಗಿಂತ ಹೆಚ್ಚು ಹೆಚ್ಚಳವಾಗಿದ್ದು, ಇದರಿಂದ ಮಹಿಳೆಯರ ಆರ್ಥಿಕ ಸದೃಢತೆ ಸಾಧ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡು ಯೋಜನೆಗಳಿಂದ ಜೀವನದಲ್ಲಿ ಆಗಿರುವ ಬದಲಾವಣೆಗಳನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ಪ್ರಕಾಶ ಆಕಳವಾಡಿ, ನೀಲಮ್ಮ ಬೋಳನವರ, ಶಕುಂತಲಾ ಅಕ್ಕಿ, ಸೋಮನಕಟ್ಟಿ ಸೇರಿದಂತೆ ಗ್ಯಾರಂಟಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಸಹಾಯಕ ಆಯುಕ್ತ ಗಂಗಪ್ಪ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಂ.ವಿ. ಚಳಗೇರಿ, ಪದ್ಮಾವತಿ ಜಿ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಮಂದಾಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಗದಗ ತಾಲ್ಲೂಕಿಗೆ ಸುಮಾರು 30 ಕೋಟಿ ರೂ. ಅನುದಾನ ಬರುತ್ತಿದೆ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP