
ಹಾಸನ, 09 ಮಾರ್ಚ್ (ಹಿ.ಸ.):
ಆ್ಯಂಕರ್:
ಮಹಿಳೆಯರು ಇಂದು ಪುರುಷರ ಸಮಾನವಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಕರ್ತವ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಹೇಳಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ‘ಬೇಟಿ ಬಚಾವೋ, ಬೇಟಿ ಪದಾವೋ’ ಯೋಜನೆಯಡಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ದಿನಾಚರಣೆಯನ್ನು ಮಹಿಳೆಯರು ಮಾತ್ರ ಆಚರಿಸಬೇಕೆಂಬುದಿಲ್ಲ. ಪುರುಷರು ಕೂಡ ಈ ದಿನವನ್ನು ಆಚರಿಸುವ ಮೂಲಕ ಮಹಿಳೆಯರು ಮತ್ತು ಪುರುಷರು ಸಮಾನರು ಎಂಬ ಸಂದೇಶವನ್ನು ಸಮಾಜಕ್ಕೆ ನೀಡಬೇಕು ಎಂದು ಅವರು ತಿಳಿಸಿದರು.
ಇಂದಿನ ಸಮಾಜ ಇನ್ನೂ ಪುರುಷ ಪ್ರಧಾನವಾಗಿದ್ದು, ಸಾವಿರ ವರ್ಷಗಳ ಹಿಂದಿನಂತೆ ಮಹಿಳೆಯರ ಬಗ್ಗೆ ಇರುವ ಮನೋಭಾವದಲ್ಲಿ ಸಾಕಷ್ಟು ಬದಲಾವಣೆ ಆಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸಂವಿಧಾನವು ಜಾತಿ, ಧರ್ಮ, ಲಿಂಗ, ಭಾಷೆ ಮತ್ತು ಪ್ರದೇಶಗಳ ಅಂತರವಿಲ್ಲದೆ ಸಮಾನತೆಯ ತತ್ವವನ್ನು ಸಾರುತ್ತದೆ. ಆದರೆ ಸಮಾಜದಲ್ಲಿ ಈ ಸಮಾನತೆ ಸಂಪೂರ್ಣವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ವಿಷಾದನೀಯ ಸಂಗತಿ ಎಂದು ಹೇಳಿದರು.
ಮಹಿಳೆಯರಿಗೆ ಸಂವಿಧಾನ ಬಲ ನೀಡಿದರೂ, ಸಮಾಜದಲ್ಲಿ ಅವರನ್ನು ಇನ್ನೂ ದ್ವಿತೀಯ ದರ್ಜೆಯ ನಾಗರಿಕರಂತೆ ಕಾಣುವ ಮನೋಭಾವ ಕೆಲವು ಕಡೆ ಮುಂದುವರಿದಿದೆ. ಸಂವಿಧಾನದ ಮೌಲ್ಯಗಳನ್ನು ಸಂಪೂರ್ಣವಾಗಿ ಪಾಲಿಸಿದಾಗ ಮಾತ್ರ ಮಹಿಳೆಯರ ಸ್ಥಿತಿಯಲ್ಲಿ ನಿಜವಾದ ಬದಲಾವಣೆ ಸಾಧ್ಯ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಂಗವಿಕಲ ಮಹಿಳೆಯರು, ಹಿಂದುಳಿದ ವರ್ಗಗಳ ಮಹಿಳೆಯರು ಹಾಗೂ ಹಿರಿಯ ನಾಗರಿಕ ಮಹಿಳೆಯರು ಸಮಾಜದಲ್ಲಿ ಇನ್ನೂ ಭದ್ರತೆ ಕೊರತೆಯನ್ನು ಅನುಭವಿಸುತ್ತಿದ್ದಾರೆ. ಇಂತಹ ಎಲ್ಲಾ ಮಹಿಳೆಯರಿಗೆ ಸಮಾನ ಭದ್ರತೆ ಮತ್ತು ಗೌರವ ದೊರೆಯಲು ಸಂವಿಧಾನದ ತತ್ವಗಳನ್ನು ಸಮಾಜದಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಒಬ್ಬ ಹೆಣ್ಣು ಮಗು ರಾಜಕೀಯ ಕ್ಷೇತ್ರಕ್ಕೆ ಬಂದಾಗ ಹಲವಾರು ಪ್ರಶ್ನೆಗಳು ಕೇಳಲಾಗುತ್ತದೆ. ಆದರೆ ಅದೇ ಸಂದರ್ಭದಲ್ಲಿ ಗಂಡು ಮಗು ರಾಜಕೀಯಕ್ಕೆ ಬಂದರೆ ಯಾರೂ ಪ್ರಶ್ನಿಸುವುದಿಲ್ಲ. ಈ ರೀತಿಯ ಮನೋಭಾವ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಿರಾಕರಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಬಿ.ಕೆ ಮಾತನಾಡಿ, ಮಹಿಳೆಯರು ನಾಲ್ಕು ಗೋಡೆಗಳೊಳಗೆ ಮಾತ್ರ ಸೀಮಿತವಾಗಿರುವವರಲ್ಲ; ಅವರು ಎಲ್ಲ ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.
“ಆಡು ಮುಟ್ಟದ ಸೊಪ್ಪಿಲ್ಲ” ಎಂಬಂತೆ ಮಹಿಳೆಯರು ತಮ್ಮ ಸ್ಪರ್ಶವಿಲ್ಲದ ಕ್ಷೇತ್ರವೇ ಇಲ್ಲ. ಆಡಳಿತ, ಶಿಕ್ಷಣ, ಆರೋಗ್ಯ, ಕ್ರೀಡೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ ಎಂದು ಅವರು ತಿಳಿಸಿದರು.
ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ ಫಲವಾಗಿ ಸಮಾಜದಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದು ಕಂಡುಬರುತ್ತಿದೆ ಎಂದು ಅವರು ಹೇಳಿದರು.
ಸಾಹಿತಿ ಶೈಲಜಾ ಮಾತನಾಡಿ, ಹೆಣ್ಣುಮಕ್ಕಳನ್ನು ಸಮಾಜದಲ್ಲಿ ಶಕ್ತಿಯ ಸ್ವರೂಪವೆಂದು ಕಾಣಲಾಗುತ್ತದೆ. ಅವರಿಗೆ ಆರ್ಥಿಕ, ಧಾರ್ಮಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ದೊರೆಯುತ್ತಿರುವುದು ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಿದೆ ಎಂದು ಹೇಳಿದರು.
ಹಿಂದಿನ ಕಾಲದಲ್ಲಿ ಮಹಿಳೆಯರು ಹಲವು ಅನಿಷ್ಟ ಪದ್ಧತಿಗಳಿಗೆ ಒಳಗಾಗುತ್ತಿದ್ದರೂ, ಇಂತಹ ಎಲ್ಲ ಅಡೆತಡೆಗಳನ್ನು ದಾಟಿ ಪುರುಷರಷ್ಟೇ ಸಮಾನರಾಗಿದ್ದೇವೆ ಎಂದು ಸಾಧನೆಯ ಮೂಲಕ ತೋರಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅನುಪಮಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಯಮುನಾ ಕೆ.ಎನ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa