ಬದಲಾದ ಕಚೇರಿ ಸಮಯ ; ನಿಗದಿತ ವೇಳೆಗೆ ಹಾಜರಿರಲು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚನೆ
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿರುವ ಹಿನ್ನೆಲೆ ಬುಧವಾರ ಬೆಳಿಗ್ಗೆಯೇ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ನಗರದ ವಿವಿಧ
ಸೂಚಿಸಿದರು


ವಿಜಯಪುರ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿರುವ ಹಿನ್ನೆಲೆ ಬುಧವಾರ ಬೆಳಿಗ್ಗೆಯೇ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ನಗರದ ವಿವಿಧ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿದರು.

ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸೇರಿದಂತೆ ಹಲವು ಇಲಾಖೆಗಳ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಿ ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಯಾವುದೇ ಸಿಬ್ಬಂದಿ ಕಡತಗಳನ್ನು ಬಾಕಿ ಉಳಿಸದೆ ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಬೇಕು. ಕಚೇರಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರದೆ ಕಡತಗಳ ವಿಲೇವಾರಿಯಲ್ಲಿ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಬಂದಾಗ ಅವರಿಗೆ ಸ್ಪಂದನೆ ನೀಡಬೇಕು. ಅವರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಿ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜೊತೆಗೆ ಯಾವುದೇ ಲೋಪದೋಷ ಉಂಟಾಗದಂತೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇದೇ ವೇಳೆ ಕಚೇರಿಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಇರಬೇಕು ಹಾಗೂ ಕಚೇರಿ ಸಮಯದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಯಲ್ಲಿರಬೇಕು. ಯಾವುದೇ ಸಮಯದಲ್ಲಿ ಹಠಾತ್ ಪರಿಶೀಲನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬದಲಾದ ಸಮಯದಂತೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನೀಡುವ ನಿರ್ದೇಶನದಂತೆ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಲು ಸಿದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande