ಭ್ರೂಣಲಿಂಗ ಪತ್ತೆ ಹಚ್ಚುವುದು ಶಿಕ್ಷಾರ್ಹ ಅಪರಾಧ : ಡಿಹೆಚ್ಒ
ಬಳ್ಳಾರಿ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭ್ರೂಣಲಿಂಗ ಪತ್ತೆ ಹಚ್ಚುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದ್ದಾರೆ. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟ
Determining fetal sex is a punishable offence: DHO


Determining fetal sex is a punishable offence: DHO


ಬಳ್ಳಾರಿ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭ್ರೂಣಲಿಂಗ ಪತ್ತೆ ಹಚ್ಚುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದ್ದಾರೆ.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆಣ್ಣು ಮಗುವಿನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಭ್ರೂಣಲಿಂಗ ಪತ್ತೆ ಮಾಡುವುದು ಅಥವಾ ಅದಕ್ಕೆ ಪ್ರಚೋದನೆ ನೀಡುವುದು ಕಾನೂನುಬಾಹಿರವಾಗಿದೆ ಎಂದು ಅವರು ತಿಳಿಸಿದರು.

ಸ್ಕ್ಯಾನಿಂಗ್ ಸೆಂಟರ್ಗಳಿಗೆ ಕಟ್ಟುನಿಟ್ಟಿನ ಸೂಚನೆ:

ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾಲಕಾಲಕ್ಕೆ ತಮ್ಮ ಪರವಾನಗಿಯನ್ನು ನವೀಕರಿಸಿಕೊಳ್ಳಬೇಕು. ಎಲ್ಲಾ ಸೆಂಟರ್ ಗಳು ಪ್ರತಿ ತಿಂಗಳ 5ನೇ ತಾರೀಖಿನೊಳಗಾಗಿ “ಎಫ್” ಫಾರಂಗಳನ್ನು ತಪ್ಪದೇ ಜಿಲ್ಲಾ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೊಸದಾಗಿ ನೋಂದಣಿ ಮಾಡಿಕೊಳ್ಳುವವರು ಸೂಕ್ತ ಸಮಯದಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದರು.

ಕಾನೂನು ಉಲ್ಲಂಘನೆಗೆ ಭಾರೀ ದಂಡ ಮತ್ತು ಜೈಲು ಶಿಕ್ಷೆ:

ಲಿಂಗ ಪತ್ತೆ ಜಾಹೀರಾತು ನೀಡಿದಲ್ಲಿ 3 ವರ್ಷ ಜೈಲು ಶಿಕ್ಷೆ ಮತ್ತು ರೂ.10,000 ದಂಡ. ವೈದ್ಯರು ಲಿಂಗ ಪತ್ತೆ ಮಾಡಿದರೆ (1ನೇ ಬಾರಿ) 3 ವರ್ಷ ಜೈಲು ಶಿಕ್ಷೆ ಮತ್ತು ರೂ.10,000 ದಂಡ. ವೈದ್ಯರು 2ನೇ ಬಾರಿ ಲಿಂಗ ಪತ್ತೆ ಮಾಡಿದರೆ 5 ವರ್ಷ ಜೈಲು ಶಿಕ್ಷೆ ಮತ್ತು ರೂ.50,000 ದಂಡ. ಲಿಂಗ ಪತ್ತೆಗೆ ಕುಟುಂಬದವರಿಂದ ಒತ್ತಾಯ ಮಾಡಿದಲ್ಲಿ (1ನೇ ಬಾರಿ) 3 ವರ್ಷ ಜೈಲು ಶಿಕ್ಷೆ ಮತ್ತು ರೂ.50,000 ದಂಡ. ಎರಡನೇ ಬಾರಿ ಮಾಡಿದಲ್ಲಿ 5 ವರ್ಷ ಜೈಲು ಶಿಕ್ಷೆ ಮತ್ತು ರೂ.1 ಲಕ್ಷ ದಂಡ ವಿಧಿಸಲಾಗುತ್ತದೆ.

ಹಾಗಾಗಿ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ 1994 ರಡಿ ವಿಧಿಸಲಾಗುವ ಶಿಕ್ಷೆಯು ಕಠಿಣವಾಗಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ಮತ್ತು ವೈದ್ಯಕೀಯ ವಲಯಕ್ಕೆ ಜಾಗೃತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್ಗಳ ಕಾರ್ಯವೈಖರಿ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.

ಈ ವೇಳೆ ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಡಾ.ಶಂಭು, ಸದಸ್ಯರಾದ ಜಿಲ್ಲಾ ಜಾರಿ ಅಧಿಕಾರಿ ಡಾ.ವೀರೇಂದ್ರ ಕುಮಾರ್, ಖಾಸಗಿ ರೇಡಿಯಾಲಜಿಸ್ಟ್ ಡಾ.ರಾಘವೇಂದ್ರ, ಜಿಲ್ಲಾ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ.ಭಾವನ, ಕುರುಗೋಡಿನ ರೇಡಿಯಾಲಜಿಸ್ಟ್ ಡಾ.ರವಿಚಂದ್ರವರ್ಮ, ಪಿಸಿ-ಪಿಎನ್ಡಿಟಿ ವಿಷಯ ನಿರ್ವಾಹಕರಾದ ಕೆ.ಹೆಚ್.ಗೋಪಾಲ್, ತಿಪ್ಪೇಸ್ವಾಮಿ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande