
ಮಂಗಳೂರು, 10 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಇಎಸ್ಐ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲೆಯ ಕಾರ್ಮಿಕರ ಆರೋಗ್ಯ ರಕ್ಷಣೆ, ಇಎಸ್ಐ ಸೌಲಭ್ಯಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಪ್ರಸ್ತುತ ಜಾರಿಯಲ್ಲಿರುವ ವಿವಿಧ ಯೋಜನೆಗಳ ಪ್ರಗತಿ ಕುರಿತು ಸವಿಸ್ತಾರ ಚರ್ಚೆ ನಡೆಸಲಾಯಿತು. ಕಾರ್ಮಿಕರಿಗೆ ಲಭ್ಯವಾಗುವ ವೈದ್ಯಕೀಯ ಸೌಲಭ್ಯಗಳು ಸುಗಮವಾಗಿ ತಲುಪುವಂತೆ ಕ್ರಮ ಕೈಗೊಳ್ಳುವ ಅಗತ್ಯವನ್ನು ಸಚಿವರು ಒತ್ತಿಹೇಳಿದರು.
ಇಎಸ್ಐ ಇಲಾಖೆಯ ಕಾರ್ಯವೈಖರಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದ ಸಚಿವರು, ಯೋಜನೆಗಳ ಜಾರಿಗೆ ವೇಗ ಹೆಚ್ಚಿಸಿ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ಸೇವೆಗಳು ದೊರೆಯುವಂತೆ ನೋಡಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಇಲಾಖೆಗಳ ನಡುವಿನ ಸಮನ್ವಯವನ್ನು ಹೆಚ್ಚಿಸಿ, ಅರ್ಹ ಫಲಾನುಭವಿಗಳಿಗೆ ಇಎಸ್ಐ ಸೌಲಭ್ಯಗಳು ತಡವಿಲ್ಲದೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದರು.
ಇದಲ್ಲದೆ, ಆಡಳಿತಾತ್ಮಕ ಸವಾಲುಗಳನ್ನು ತ್ವರಿತವಾಗಿ ಪರಿಹರಿಸುವ ಮೂಲಕ ಸೇವಾ ವಿತರಣೆಯನ್ನು ಸುಧಾರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa