
ಗದಗ, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಆಧುನಿಕ ತಂತ್ರಜ್ಞಾನ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಗುರಿ ಹೊಂದಿ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದಾಗ ಮಾತ್ರ ಉಜ್ವಲ ಭವಿಷ್ಯ ಸಾಧಿಸಲು ಸಾಧ್ಯ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಹೇಳಿದರು.
ಗದಗ ನಗರದ ವಿದ್ಯಾದಾನ ಸಮಿತಿಯ ಶ್ರೀಮತಿ ಎಂ.ಬಿ. ಹುಯಿಲಗೋಳ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಡಿ.ಎಲ್.ಎಡ್ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ನೂತನ ತಂತ್ರಜ್ಞಾನ ಕೌಶಲಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಶಿಸ್ತುಬದ್ಧ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಯಶ್ರೀ ಕವಲೂರು ಅವರು ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾದುದು. ಶಿಕ್ಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಿ, ಅವರ ಮಟ್ಟಕ್ಕೆ ಇಳಿದು ಪಾಠ ಮಾಡಬೇಕು. ಉತ್ತಮ ಸಂಸ್ಕಾರ ಮತ್ತು ನೈತಿಕತೆ ಬೆಳೆಸಿ ಆದರ್ಶ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಕಾರಣರಾಗಬೇಕು ಎಂದು ಹೇಳಿದರು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಗಂಗೂಬಾಯಿ ಅವರು ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಿಗೆ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿ, ತಮ್ಮ ಜೀವನ ಅನುಭವಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಈ ಸಂದರ್ಭದಲ್ಲಿ ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ಕು. ಅಕ್ಷತಾ ಹಿರೇಮಠ ಅವರಿಗೆ ದಿ. ಜೆ.ಕೆ. ನಾಗರಕಟ್ಟೆ ಸ್ಮರಣಾರ್ಥ ಬಂಗಾರದ ಪದಕ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾದಾನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಹುಯಿಲಗೋಳ ವಹಿಸಿದ್ದರು. ಪ್ರಾರ್ಥನೆಯನ್ನು ಕು. ಮೇಘಾ ಮುದ್ದಿ ನೆರವೇರಿಸಿದರು. ಪ್ರೊ. ವಿ.ಪಿ. ಪಾಟೀಲ ಸ್ವಾಗತಿಸಿದರು. ಪ್ರೊ. ಡಾ. ಡಿ.ಎಲ್. ಪಾಟೀಲ ನಿರೂಪಿಸಿದರು ಹಾಗೂ ಪ್ರೊ. ಎನ್.ಜಿ. ಚನ್ನಪ್ಪಗೌಡ್ರ ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / lalita MP