
ಬೆಂಗಳೂರು, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜೆಡಿಎಸ್ ಪಕ್ಷದ 25ನೇ ವರ್ಷದ ಬೆಳ್ಳಿ ಹಬ್ಬದ ಅಂಗವಾಗಿ ಬೆಂಗಳೂರು ನಗರ ಹೊರವಲಯದ ಕೊಮ್ಮಘಟ್ಟದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಹಲವು ಹಾಲಿ ಹಾಗೂ ಮಾಜಿ ಶಾಸಕರು, ಸಂಸದರು ಹಾಜರಿದ್ದರು.
ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, “ರಾಜ್ಯಕ್ಕೆ ಹಿಡಿದಿರುವ ಗ್ರಹಣವನ್ನು ದೂರ ಮಾಡಲು ಜೆಡಿಎಸ್ಗೆ ಒಂದು ಬಾರಿ ಅವಕಾಶ ನೀಡಿ” ಎಂದು ಜನರಿಗೆ ಮನವಿ ಮಾಡಿದರು. ತಮ್ಮ ಆಡಳಿತಾವಧಿಯಲ್ಲಿ ಮೆಟ್ರೋ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಹೇಳಿದ ಅವರು, ಪ್ರಸ್ತುತ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.
ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಬೆಂಗಳೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಯಾವುದೇ ಕೊಡುಗೆ ನೀಡಿಲ್ಲ ಎಂದು ಟೀಕಿಸಿದರು. ದೇವೇಗೌಡ ಮತ್ತು ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಐಟಿ-ಬಿಟಿ ಕ್ಷೇತ್ರ ಸೇರಿದಂತೆ ಹಲವು ಪ್ರಮುಖ ಯೋಜನೆಗಳು ರೂಪಗೊಂಡವು ಎಂದು ಹೇಳಿದರು. “ಜಿಬಿಎ ಅಂದರೆ ಗಾರ್ಬೇಜ್, ಬ್ಯಾಡ್ ರೋಡ್, ಎ ಖಾತೆ ಸ್ಕ್ಯಾಮ್” ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಇನ್ನೊಂದೆಡೆ, ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ, ರೈತರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರ ಇದಾಗಿದೆ ಎಂದು ಆರೋಪಿಸಿದರು. ತಮ್ಮ ಆಡಳಿತಾವಧಿಯಲ್ಲಿ ರೈತರಿಗೆ ನೆರವು ನೀಡಿದ ಬಗ್ಗೆ ಉಲ್ಲೇಖಿಸಿದ ಅವರು, ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವ ವೇದಿಕೆಯಲ್ಲಾದರೂ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa