
ಬೆಂಗಳೂರು, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ದೇಶದ ಮೊಟ್ಟಮೊದಲ ಆಟೋಮೊಬೈಲ್ ಸಂಶೋಧನಾ ಸಂಸ್ಥೆ (ಎಆರ್ಎಐ) ಕೇಂದ್ರವನ್ನು ಮಂಡ್ಯದಲ್ಲಿ ಸ್ಥಾಪಿಸುವ ಸಂಬಂಧ ಮಹತ್ವದ ಚರ್ಚೆ ನಡೆಯಿತು. ಕೇಂದ್ರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿ ಈ ಮಹತ್ವಾಕಾಂಕ್ಷಿ ಯೋಜನೆ ಕುರಿತು ಸಮಾಲೋಚನೆ ನಡೆಸಿದರು.
ಈ ಯೋಜನೆಗಾಗಿ ರಾಜ್ಯ ಸರ್ಕಾರ ಈಗಾಗಲೇ 100 ಎಕರೆ ಭೂಮಿಯನ್ನು ಮೀಸಲಿಟ್ಟಿದ್ದು, ಕೇಂದ್ರ ಹಾಗೂ ಎಆರ್ಎಐ ಅಧಿಕಾರಿಗಳ ತಂಡವು ಸ್ಥಳ ಪರಿಶೀಲನೆ ನಡೆಸಿರುವುದನ್ನು ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಆದರೆ, ಕೇವಲ ಸಂಶೋಧನಾ ಕೇಂದ್ರ ಸ್ಥಾಪನೆಗೆ ಸೀಮಿತವಾಗದೆ, ಭವಿಷ್ಯದಲ್ಲಿ ಅದರ ಸುತ್ತಮುತ್ತ ಪೂರಕ ಕೈಗಾರಿಕೆಗಳು ಹಾಗೂ ಬೃಹತ್ ಆಟೋಮೊಬೈಲ್ ಉದ್ಯಮಗಳು ಬೆಳೆಯುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಯೋಜನೆಯನ್ನು 500 ಎಕರೆ ಪ್ರದೇಶದಲ್ಲಿ ವಿಸ್ತರಿಸುವ ಕುರಿತು ಚರ್ಚೆ ನಡೆಸಲಾಗಿದೆ.
ಈ ಹಿನ್ನೆಲೆಯಲ್ಲಿ ಭೂಮಿಯ ಲಭ್ಯತೆ ಕುರಿತು ತಕ್ಷಣವೇ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಶಾಸಕರಾದ ಹೆಚ್.ಡಿ. ರೇವಣ್ಣ, ಸಂಸದರಾದ ಎಂ. ಮಲ್ಲೇಶ್ ಬಾಬು, ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ ಹಾಗೂ ಸಿ.ಎಸ್. ಪುಟ್ಟರಾಜು, ಮಂಡ್ಯ ಶಾಸಕರಾದ ರವಿಕುಮಾರ್, ವಿಧಾನ ಪರಿಷತ್ ಸದಸ್ಯರಾದ ಸರವಣ, ಎಆರ್ಎಐ ನಿರ್ದೇಶಕರಾದ ಡಾ. ರೇಜಿಮಥಾಯಿ, ಉಪನಿರ್ದೇಶಕರಾದ ಡಾ. ಬಿ.ವಿ. ಶಾಮಸುಂದರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa