ಕೆರೆಗಳ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ
ದಾವಣಗೆರೆ, 15 ಏಪ್ರಿಲ್ (ಹಿ.ಸ.) : ಆ್ಯಂಕರ್ : ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ
Meeting


ದಾವಣಗೆರೆ, 15 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ದಾವಣಗೆರೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande