
ಬೆಂಗಳೂರು, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಕ್ಷೇತ್ರವಿಂಗಡಣೆ ಮತ್ತು ಜನಗಣತಿ ಪೂರ್ಣಗೊಳ್ಳುವವರೆಗೆ ಕಾಯಬೇಕೆಂಬ ಷರತ್ತುಗಳನ್ನು ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಸದಸ್ಯರು ಕೆಪಿಸಿಸಿ ಕಚೇರಿ ಎದುರು ತೀವ್ರ ಪ್ರತಿಭಟನೆ ನಡೆಸಿದರು.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪ್ರತಿಭಟನಾಕಾರರು ಮಹಿಳಾ ಮೀಸಲಾತಿ ಕಾಯ್ದೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಕ್ಷೇತ್ರವಿಂಗಡಣೆ ಹಾಗೂ ಜನಗಣತಿ ಪೂರ್ಣಗೊಳ್ಳುವವರೆಗೆ ಕಾಯಬೇಕೆಂಬ ಷರತ್ತು ಮಹಿಳೆಯರ ರಾಜಕೀಯ ಪ್ರತಿನಿಧಿತ್ವವನ್ನು ಮುಂದೂಡುವ ಪ್ರಯತ್ನವಾಗಿದೆ ಎಂದು ಅವರು ಆರೋಪಿಸಿದರು.
ಮಹಿಳೆಯರಿಗೆ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಸಮರ್ಪಕ ಅವಕಾಶ ಕಲ್ಪಿಸುವ ಉದ್ದೇಶದಿಂದ ಅಂಗೀಕರಿಸಲಾದ ಮೀಸಲಾತಿ ಕಾಯ್ದೆಯನ್ನು ಯಾವುದೇ ವಿಳಂಬವಿಲ್ಲದೆ ಅನುಷ್ಠಾನಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಮಹಿಳಾ ರಾಜಕೀಯ ಸಬಲೀಕರಣಕ್ಕೆ ಸರ್ಕಾರ ಬದ್ಧತೆ ತೋರಬೇಕೆಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa