ಖಾಸಗಿ ಬಸ್-ಕಾರು ಭೀಕರ ಅಪಘಾತ : ಒಂದೇ ಕುಟುಂಬದ 6 ಜನರ ಸಾವು
ಯಾದಗಿರಿ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ತೆರಳುತ್ತಿದ್ದ ಕಾರು ಹಾಗೂ ಬೆ
Accident


ಯಾದಗಿರಿ, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಯಾದಗಿರಿಯಿಂದ ರಾಯಚೂರು ಕಡೆ ತೆರಳುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಮತ್ತು ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮೃತರನ್ನು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ನಿವಾಸಿಗಳಾದ ಕೌನ್ಸಿಲರ್ ಕೃಷ್ಣನಾಯಕ್ (50), ಅವರ ಪತ್ನಿ ಅನಂತ್ ಕಲಾ (45), ಶರಣಪ್ಪ (36), ಅವರ ಪತ್ನಿ ನಿಸರ್ಗ (30), ಪುತ್ರ ಸಿದ್ದಾರ್ಥ್ (3) ಹಾಗೂ ಶಶಿಕಲಾ (30) ಎಂದು ಗುರುತಿಸಲಾಗಿದೆ.

ಅಮಾವಾಸ್ಯೆ ಹಿನ್ನೆಲೆ ವೇಣುಗೋಪಾಲ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಭೀಕರ ಅಪಘಾತದಲ್ಲಿ ಕಾರು ಮತ್ತು ಬಸ್ ಬೆಂಕಿಗಾಹುತಿಯಾದರೂ, ಕಾರಿನಲ್ಲಿದ್ದ ಅಥ್ವಿಕ್ (5) ಮತ್ತು ಒಂದು ವರ್ಷದ ಮಗು ಶ್ರೀನಿಧಿ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ. ಇಬ್ಬರು ಮಕ್ಕಳಿಗೂ ಗಾಯಗಳಾಗಿದ್ದು, ಅವರನ್ನು ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಕಾರಿನಲ್ಲಿ ಒಂದೇ ಕುಟುಂಬದ ಎಂಟು ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

ದೇವರ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಕಾರು ಓವರ್ಟೇಕ್ ಮಾಡಲು ಹೋಗಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರು ಬಸ್ಗೆ ಡಿಕ್ಕಿ ಹೊಡೆದ ನಂತರ ಸುಮಾರು 50 ಮೀಟರ್ ದೂರದವರೆಗೆ ಬಸ್ ಕಾರನ್ನು ಎಳೆದುಕೊಂಡು ಹೋಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande