
ವಿಜಯಪುರ, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಾಧ್ಯಮ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ವೃತ್ತಿ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಪ್ರೊ. ಓಂಕಾರ ಕಾಕಡೆ ಹೇಳಿದರು.
ವಿಜಯಪುರ ನಗರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ “ಸ್ಟುಡಿಯೋ ಟೂರ್” ಮತ್ತು ಟಿವಿ ಆಂಕರ್ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೋದ್ಯಮವು ವೃತ್ತಿ ಜೀವನಕ್ಕೆ ಅಗತ್ಯವಾದ ಹಲವು ಕೌಶಲ್ಯಗಳನ್ನು ನೀಡುತ್ತದೆ. ಈ ಕ್ಷೇತ್ರವನ್ನು ಆಯ್ಕೆ ಮಾಡುವುದರಿಂದ ವ್ಯಕ್ತಿಗತ ಬೆಳವಣಿಗೆ ಜೊತೆಗೆ ಸಮಾಜದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೋರ್ಸ್ ಆಯ್ಕೆ ಮಾಡುವಾಗ ಬೇರೆಯವರ ಮೇಲೆ ಅವಲಂಬಿತರಾಗದೆ, ತಮ್ಮ ಸಾಮರ್ಥ್ಯ ಮತ್ತು ಸ್ಪಷ್ಟ ಗುರಿಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ್ ಮಾತನಾಡಿ, ಪ್ರತಿಯೊಬ್ಬರೂ ಸುದ್ದಿಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಟಿವಿ ಸ್ಟುಡಿಯೋ ಕಾರ್ಯವೈಖರಿ, ಸುದ್ದಿ ಸಂಗ್ರಹಣೆದಿಂದ ಪ್ರಸಾರವರೆಗಿನ ಹಂತಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕಿ ಡಾ. ತಹಮೀನಾ ಕೋಲಾರ, ಅತಿಥಿ ಉಪನ್ಯಾಸಕಿ ಹುಲಿಗೆಮ್ಮ, ಸುಷ್ಮಾ ಪವಾರ, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande