
ಬೆಂಗಳೂರು, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಒಣ ಹವೆ ಮತ್ತು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯೂ ಇದೆ.
ಇಂದಿನಿಂದ ಏಪ್ರಿಲ್ 21ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ಹೆಚ್ಚಿದ ಆರ್ದ್ರತೆಯ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಇದರಿಂದ ಕರಾವಳಿ ಭಾಗದ ಜನರು ಹೆಚ್ಚು ಉಷ್ಣತೆಯನ್ನು ಅನುಭವಿಸುವ ಸಾಧ್ಯತೆ ಇದೆ.
ಇದೇ ವೇಳೆ ರಾಜ್ಯದಾದ್ಯಂತ ಹಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆಲಿಕಲ್ಲು ಮಳೆಯಾಗುವ ಮುನ್ಸೂಚನೆಯನ್ನೂ ಇಲಾಖೆ ನೀಡಿದೆ.
ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಸಂಭವಿಸುವ ಸಾಧ್ಯತೆ ಇರುವುದರಿಂದ ರೈತರು, ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಇಲಾಖೆ ಸೂಚಿಸಿದೆ. ವಿಶೇಷವಾಗಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯ ಸಂದರ್ಭದಲ್ಲಿ ತೆರೆದ ಪ್ರದೇಶಗಳಲ್ಲಿ ನಿಲ್ಲುವುದು, ಮರಗಳ ಕೆಳಗೆ ಆಶ್ರಯ ಪಡೆಯುವುದು ಹಾಗೂ ಅನಗತ್ಯವಾಗಿ ಹೊರಗೆ ಸಂಚರಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa