
ಹಾವೇರಿ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ವಿರೋಧವಿಲ್ಲ. ಆದರೆ ಕ್ಷೇತ್ರ ಮರುವಿಂಗಡಣೆಯೊಂದಿಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಜೋಡಿಸಿರುವುದೇ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಉಂಟುಮಾಡುವ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ 2023ರಲ್ಲೇ ಅಂಗೀಕಾರವಾಗಿದೆ. ಆದರೆ ಅದನ್ನು ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಿ ಮಂಡಿಸಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ನೀಡುವ ವ್ಯವಸ್ಥೆಯನ್ನು ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ಮೂಲಕ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕಾಲದಲ್ಲೇ ಜಾರಿಗೆ ತರಲಾಯಿತು. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳಾ ಮೀಸಲಾತಿ ಕಲ್ಪಿಸುವಲ್ಲಿ ಬಿಜೆಪಿ ಯಾವುದೇ ಪಾತ್ರವಹಿಸಿರಲಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು. ಉತ್ತರ ಪ್ರದೇಶದಲ್ಲಿ ಈಗಿರುವ 80 ಲೋಕಸಭಾ ಸ್ಥಾನಗಳು 120ಕ್ಕೆ ಏರಬಹುದಾದರೆ, ಕರ್ನಾಟಕದಲ್ಲಿ ಕೇವಲ 42 ಸ್ಥಾನಗಳಷ್ಟೇ ಆಗುವ ಸಾಧ್ಯತೆ ಇದೆ. ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಸ್ಥಾನಗಳು ಸಿಗುವ ರೀತಿಯ ಮರುವಿಂಗಡಣೆಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸಂವಿಧಾನ ತಿದ್ದುಪಡಿಗೆ ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತ ಬೇಕು. ಜೊತೆಗೆ ಕನಿಷ್ಠ 50 ಶೇಕಡಾ ರಾಜ್ಯಗಳ ಒಪ್ಪಿಗೆ ಅಗತ್ಯವಿದೆ. ಕ್ಷೇತ್ರ ಮರುವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ಅಲ್ಲ ಎಂದು ಮುಖ್ಯಮಂತ್ರಿ ಪುನರುಚ್ಚರಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯೆಂದು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಭಾಷಣ ಮಾಡಲಾಗುತ್ತಿದೆ ಎಂದು ಟೀಕಿಸಿದರು.
450ಕ್ಕೂ ಹೆಚ್ಚು ಮತಗಳಿಂದ ಅಂಗೀಕಾರವಾದ ಮಸೂದೆಯನ್ನು ಕೇಂದ್ರ ಸರ್ಕಾರ ಇನ್ನೂ ಏಕೆ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದ ಅವರು, ಕ್ಷೇತ್ರ ಮರುವಿಂಗಡಣೆಯನ್ನು ಬೇರ್ಪಡಿಸಿ ಮಹಿಳಾ ಮೀಸಲಾತಿ ಮಸೂದೆ ತಂದಿದ್ದರೆ ಯಾರೂ ವಿರೋಧಿಸುತ್ತಿರಲಿಲ್ಲ ಎಂದರು.
ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa