
ಬೆಂಗಳೂರು, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕಲಬುರಗಿ–ಯಾದಗಿರಿ ರಸ್ತೆ ಮಾರ್ಗದಲ್ಲಿ ಬಸ್ ನಿಲ್ದಾಣಗಳ ಕೊರತೆ ಕುರಿತು ವಿಧಾನ ಸಭೆ ಪ್ರತಿ ಪಕ್ಷದ ನಾಯಕ ಆರ್. ಅಶೋಕ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ಹಂಚಿಕೊಂಡಿರುವ ಆರ್. ಅಶೋಕ್, ಕಲಬುರಗಿ–ಯಾದಗಿರಿ ರಸ್ತೆಯ ಸುಮಾರು 90 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದೇ ಒಂದು ಬಸ್ ನಿಲ್ದಾಣವೂ ಇಲ್ಲದೆ ಜನರು ಬಿಸಿಲಿನಲ್ಲಿ ನರಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
45 ಡಿಗ್ರಿ ಉಷ್ಣಾಂಶದ ನಡುವೆಯೂ ಮಕ್ಕಳು, ಗರ್ಭಿಣಿಯರು ಹಾಗೂ ವಯೋವೃದ್ಧರು ರಸ್ತೆ ಬದಿಯಲ್ಲಿ ನೆರಳಿಲ್ಲದೆ ನಿಲ್ಲಬೇಕಾದ ಪರಿಸ್ಥಿತಿ ಇದೆ. ಕುಡಿಯುವ ನೀರು ಮತ್ತು ಶೌಚಾಲಯಗಳಂತಹ ಮೂಲಭೂತ ಸೌಲಭ್ಯಗಳೂ ಇಲ್ಲ ಎಂದು ಅವರು ದೂರಿದ್ದಾರೆ.
ದಶಕಗಳಿಂದ ಕಲ್ಯಾಣ ಕರ್ನಾಟಕ ಭಾಗವನ್ನು ಪ್ರತಿನಿಧಿಸುತ್ತಿರುವ ಖರ್ಗೆ ಕುಟುಂಬ ಈ ಭಾಗದ ಜನರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ. ಜನರ ಹೆಸರಿನಲ್ಲಿ ಅಧಿಕಾರ ಅನುಭವಿಸಿ, ಮೂಲಸೌಕರ್ಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.
ಕಲಬುರಗಿ–ಯಾದಗಿರಿ ಮಾರ್ಗದಲ್ಲಿ ತಕ್ಷಣ ಬಸ್ ನಿಲ್ದಾಣಗಳು ಮತ್ತು ಅಗತ್ಯ ಸೌಲಭ್ಯಗಳನ್ನು ನಿರ್ಮಿಸಬೇಕು. ಇಲ್ಲವಾದರೆ ಕಲ್ಯಾಣ ಕರ್ನಾಟಕದ ಜನರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa