ಸರಕಾರದ ನೀತಿಗಳಲ್ಲಿ ನ್ಯಾಯಾಲಯದ ಹಸ್ತಕ್ಷೇಪ ದುರದೃಷ್ಟಕರ : ಎ.ಎನ್. ನಟರಾಜ್ ಗೌಡ
ಬೆಂಗಳೂರು, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಾದ ಹಿಂದಿ ಮತ್ತು ಸಂಸ್ಕೃತಕ್ಕೆ ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಡೆಯೊಡ್ಡಿ, ಅಂಕಗಳನ್ನೇ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರು
ಸರಕಾರದ ನೀತಿಗಳಲ್ಲಿ ನ್ಯಾಯಾಲಯದ ಹಸ್ತಕ್ಷೇಪ ದುರದೃಷ್ಟಕರ : ಎ.ಎನ್. ನಟರಾಜ್ ಗೌಡ


ಬೆಂಗಳೂರು, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಾದ ಹಿಂದಿ ಮತ್ತು ಸಂಸ್ಕೃತಕ್ಕೆ ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಡೆಯೊಡ್ಡಿ, ಅಂಕಗಳನ್ನೇ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಕೆಪಿಸಿಸಿ ವಕ್ತಾರ ಎ. ಎನ್. ನಟರಾಜ್ ಗೌಡ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕೈಗೊಂಡಿದ್ದ ವಿದ್ಯಾರ್ಥಿ ಸ್ನೇಹಿ ಕ್ರಮಕ್ಕೆ ತಾಂತ್ರಿಕ ಕಾರಣ ನೀಡಿ ತಡೆ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಆಟದ ಮಧ್ಯೆ ನಿಯಮ ಬದಲಿಸುವಂತಿಲ್ಲ” ಎಂಬ ಆಧಾರದ ಮೇಲೆ ನ್ಯಾಯಾಲಯ ತೀರ್ಪು ನೀಡಿದೆ. ಆದರೆ, ತೃತೀಯ ಭಾಷೆಯಲ್ಲಿ ವಿಶೇಷವಾಗಿ ಹಿಂದಿ ವಿಷಯದಲ್ಲಿ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಆಗುವ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗ್ರೇಡ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿತ್ತು ಎಂದು ಅವರು ಹೇಳಿದ್ದಾರೆ.

ಈ ವರ್ಷದ ಫಲಿತಾಂಶವನ್ನು 625 ಅಂಕಗಳ ಆಧಾರದಲ್ಲೇ ಪ್ರಕಟಿಸಿದರೂ ಪರವಾಗಿಲ್ಲ. ಆದರೆ ಹಿಂದಿ ಭಾಷೆಯಲ್ಲಿ ಕಡಿಮೆ ಅಂಕ ಪಡೆದ ಕಾರಣಕ್ಕೆ ರಾಜ್ಯದ ಯಾವುದೇ ವಿದ್ಯಾರ್ಥಿ ಅನುತ್ತೀರ್ಣರಾಗಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತೃತೀಯ ಭಾಷೆಯ ಅಂಕಗಳ ಕೊರತೆಯಿಂದ ಮುಂದಿನ ಶಿಕ್ಷಣದಿಂದ ವಂಚಿತರಾಗಬಾರದು. ಆದ್ದರಿಂದ ತೃತೀಯ ಭಾಷೆಗೆ ಕನಿಷ್ಠ ತೇರ್ಗಡೆ ಅಂಕಗಳ ವಿನಾಯಿತಿ ನೀಡುವುದು ಅಥವಾ ಪರ್ಯಾಯ ವ್ಯವಸ್ಥೆ ಜಾರಿಗೆ ತಂದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಇಲಾಖೆಗೆ ಮನವಿ ಮಾಡಿರುವ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಡಿಂಗ್ ಪದ್ಧತಿ ಜಾರಿಗೆ ತರಲು ನ್ಯಾಯಾಲಯ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು ಎಂದು ಹೇಳಿದ್ದಾರೆ.

ಮುಂದಿನ ವರ್ಷದಿಂದ ತೃತೀಯ ಭಾಷೆಗೆ ಗ್ರೇಡ್ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ವಿದ್ಯಾರ್ಥಿಗಳ ಮೇಲಿನ ಅನಗತ್ಯ ಒತ್ತಡ ಕಡಿಮೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande