ಮಹಿಳಾ ಮೀಸಲಾತಿ ವಿಚಾರದಲ್ಲಿ ಡಿಎಂಕೆ ರಾಜಕೀಯಕ್ಕೆ ಮಣಿದು ರಾಜ್ಯದ ಹಿತ ಬಲಿ : ಬೊಮ್ಮಾಯಿ
ಹಾವೇರಿ, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ರಾಜ್ಯ ಸರ್ಕಾರವು ಡಿಎಂಕೆಯ ರಾಜಕೀಯ ಒತ್ತಡಕ್ಕೆ ಮಣಿದು ಕರ್ನಾಟಕದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹಾವೇರಿಯಲ್ಲಿ ಪತ್
ಮಹಿಳಾ ಮೀಸಲಾತಿ ವಿಚಾರದಲ್ಲಿ ಡಿಎಂಕೆ ರಾಜಕೀಯಕ್ಕೆ ಮಣಿದು ರಾಜ್ಯದ ಹಿತ ಬಲಿ : ಬೊಮ್ಮಾಯಿ


ಹಾವೇರಿ, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ರಾಜ್ಯ ಸರ್ಕಾರವು ಡಿಎಂಕೆಯ ರಾಜಕೀಯ ಒತ್ತಡಕ್ಕೆ ಮಣಿದು ಕರ್ನಾಟಕದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಜ್ಞರೊಂದಿಗೆ ಸಮಗ್ರ ಚರ್ಚೆ ನಡೆಸಿ ಸ್ಪಷ್ಟ ನಿಲುವು ಕೈಗೊಳ್ಳಬೇಕು. ತಮ್ಮ ಪಕ್ಷದ ನಾಯಕರನ್ನು ಮನವರಿಕೆ ಮಾಡಿಕೊಂಡು ಮಹಿಳಾ ಮೀಸಲಾತಿ ವಿಚಾರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಮಹಿಳಾ ಮೀಸಲಾತಿಯ ಇತಿಹಾಸವನ್ನು ಉಲ್ಲೇಖಿಸಿದ ಅವರು, ಕರ್ನಾಟಕವು ದೇಶದಲ್ಲೇ ಮೊದಲಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ ರಾಜ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದರು. ರಾಮಕೃಷ್ಣ ಹೆಗಡೆ ಮತ್ತು ನಂತರ ದೇವೇಗೌಡ ಅವರ ಆಡಳಿತದಲ್ಲಿ ಈ ಕ್ರಮವನ್ನು ಬಲಪಡಿಸಲಾಯಿತು. ಬಳಿಕ ಪಿ.ವಿ. ನರಸಿಂಹರಾವ್ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದ 73ನೇ ತಿದ್ದುಪಡಿ ಮೂಲಕ ದೇಶಾದ್ಯಂತ ಜಾರಿಗೊಳಿಸಿತು ಎಂದರು. ಮಹಿಳಾ ಹಕ್ಕುಗಳ ವಿಚಾರವನ್ನು ಸ್ವಾತಂತ್ರ್ಯ ಭಾರತದ ಆರಂಭದಲ್ಲೇ ಡಾ. ಬಿ.ಆರ್. ಅಂಬೇಡ್ಕರ್ ಪ್ರಸ್ತಾಪಿಸಿದ್ದರು ಎಂದು ಹೇಳಿದರು.

ದಕ್ಷಿಣ ರಾಜ್ಯಗಳಿಗೆ ಅನ್ಯಾಯದ ಭೀತಿ

ಹೊಸ ಜನಗಣತಿ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ನಡೆಸಿದರೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಇಂದಿರಾ ಗಾಂಧಿ ಅವಧಿಯಲ್ಲಿ ಜನಗಣತಿ ಆಧಾರದ ಮರುವಿಂಗಡಣೆಯನ್ನು ದೀರ್ಘಕಾಲ ಸ್ಥಗಿತಗೊಳಿಸಲಾಗಿತ್ತು. ಇದರ ಪರಿಣಾಮವಾಗಿ ದಕ್ಷಿಣ ರಾಜ್ಯಗಳಿಗೆ ಅನಾನುಕೂಲ ಉಂಟಾಗಿದೆ ಎಂದು ಹೇಳಿದರು.

ಕರ್ನಾಟಕಕ್ಕೆ ಸೀಟು ಹೆಚ್ಚಳದ ಅವಕಾಶ

ರಾಜ್ಯದಲ್ಲಿ ಈಗಿರುವ 28 ಲೋಕಸಭಾ ಕ್ಷೇತ್ರಗಳನ್ನು 42ಕ್ಕೆ ಹೆಚ್ಚಿಸುವ ಅವಕಾಶವಿತ್ತು. 2011ರ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳ ಹಂಚಿಕೆ ಮಾಡಬೇಕೆಂಬ ಪ್ರಸ್ತಾಪವಿತ್ತು. ಆದರೆ ರಾಜಕೀಯ ಕಾರಣಗಳಿಂದ ಈ ಅವಕಾಶ ಕೈ ತಪ್ಪುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ಟೀಕೆ

ಡಿಎಂಕೆಯ ಪ್ರಾದೇಶಿಕ ರಾಜಕೀಯ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಅವರು ಟೀಕಿಸಿದರು. ಈ ವಿಚಾರದಲ್ಲಿ ಇತರ ದಕ್ಷಿಣ ರಾಜ್ಯಗಳು ಸಂಪೂರ್ಣವಾಗಿ ಡಿಎಂಕೆಯ ನಿಲುವಿಗೆ ಬೆಂಬಲ ನೀಡಿಲ್ಲ ಎಂದರು. ಮಹಿಳಾ ಮೀಸಲಾತಿ ಜಾರಿಗೆ ತರಲು ಎಲ್ಲ ಪಕ್ಷಗಳ ಸಹಕಾರ ಅಗತ್ಯವಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಈ ವಿಷಯದಲ್ಲಿ ಯಾರೊಬ್ಬರೂ ಕ್ರೆಡಿಟ್ ಪಡೆಯುವ ಪ್ರಶ್ನೆಯಿಲ್ಲ ಎಂದು ಹೇಳಿರುವುದನ್ನು ಉಲ್ಲೇಖಿಸಿದ ಅವರು, ಎಲ್ಲ ಪಕ್ಷಗಳು ಒಗ್ಗಟ್ಟಿನಿಂದ ಬೆಂಬಲ ನೀಡಿದ್ದರೆ ಮಹತ್ವದ ಬದಲಾವಣೆಗೆ ದಾರಿ ಮಾಡಿಕೊಡಬಹುದಿತ್ತು ಎಂದು ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande