
ಹಾವೇರಿ, 23 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡದಿರುವುದು ಜಿಲ್ಲೆಯ ಜನತೆ ಹಾಗೂ ಎಲ್ಲ ಪಕ್ಷದ ನಾಯಕರಲ್ಲಿ ನಿರಾಸೆ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಆಸ್ಪತ್ರೆಯ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಆಗ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ, ಬಜೆಟ್ನಲ್ಲಿ ಘೋಷಣೆ ಮಾಡದಿರುವುದು ಬೇಸರ ತಂದಿದೆ ಎಂದರು.
ಹಾವೇರಿ ಜಿಲ್ಲೆಯಲ್ಲಿ ಈಗಾಗಲೇ ಮೆಡಿಕಲ್ ಕಾಲೇಜು, ವಿಶ್ವವಿದ್ಯಾಲಯ, ಇಂಜಿನಿಯರಿಂಗ್ ಹಾಗೂ ಕಾನೂನು ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿಲ್ಲೆಯಲ್ಲಿ ಅಪಘಾತಗಳು ನಡೆದರೆ ರೋಗಿಗಳು ಹುಬ್ಬಳ್ಳಿ ಅಥವಾ ದಾವಣಗೆರೆ ಆಸ್ಪತ್ರೆಗೆ ತೆರಳಬೇಕಾಗುತ್ತದೆ. ಇದರಿಂದ ಜೀವಹಾನಿ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅಗತ್ಯ ಎಂದು ಅವರು ಒತ್ತಿಹೇಳಿದರು.
ಈಗಾದರೂ ಸರ್ಕಾರ ತಪ್ಪನ್ನು ಸರಿಪಡಿಸಿ ಪೂರಕ ಬಜೆಟ್ನಲ್ಲಿ ಅನುದಾನ ನೀಡಿ ಆಸ್ಪತ್ರೆಗೆ ಅನುಮತಿ ನೀಡಬೇಕು. ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಒತ್ತಡ ಹೇರಿದ್ದಾರೆ. ಮುಖ್ಯಮಂತ್ರಿ ಅದಕ್ಕೆ ಮನ್ನಣೆ ನೀಡಬೇಕು ಎಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa