ಹೆಚ್.ಐ.ವಿ ಮುಕ್ತ ಜಿಲ್ಲೆಗಾಗಿ ಜಾಗೃತಿ ಕಾರ್ಯಕ್ರಮಗಳಿಗೆ ವೇಗ : ಜಿಲ್ಲಾಧಿಕಾರಿ
ದಾವಣಗೆರೆ, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹೆಚ್.ಐ.ವಿ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ
ಹೆಚ್.ಐ.ವಿ ಮುಕ್ತ ಜಿಲ್ಲೆಗಾಗಿ ಜಾಗೃತಿ ಕಾರ್ಯಕ್ರಮಗಳಿಗೆ ವೇಗ : ಜಿಲ್ಲಾಧಿಕಾರಿ


ದಾವಣಗೆರೆ, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹೆಚ್.ಐ.ವಿ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯನ್ನು ಹೆಚ್.ಐ.ವಿ ಮುಕ್ತವಾಗಿಸಲು ಹೆಚ್ಚಿನ ಒತ್ತು ನೀಡುವಂತೆ ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಪಿ.ಡಿ. ಮುರಳೀಧರ್ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಪ್ರಮುಖ ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಹೆಚ್.ಐ.ವಿ ತಪಾಸಣೆಯನ್ನು ಕಡ್ಡಾಯಗೊಳಿಸಲಾಗಿದ್ದು, ಪಾಸಿಟಿವ್ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಉಚಿತ ಎಆರ್ಟಿ ಚಿಕಿತ್ಸೆಗಾಗಿ ಶಿಫಾರಸು ಮಾಡಲು ಸೂಚಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಲಾರಿ ಚಾಲಕರು ಮತ್ತು ವಲಸೆ ಕಾರ್ಮಿಕರು ಹೆಚ್ಚಾಗಿ ಸೇರುವ ರಸ್ತೆ ಬದಿಯ ಡಾಬಾಗಳು ಹಾಗೂ ಹೈವೇ ಪಾಯಿಂಟ್ಗಳಲ್ಲಿ ವಿಶೇಷ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಎನ್ಜಿಒಗಳಿಗೆ ಜವಾಬ್ದಾರಿ ನೀಡಲಾಗಿದೆ. ಪ್ರಸ್ತುತ ಸುಮಾರು 4,500 ನೋಂದಾಯಿತ ಲೈಂಗಿಕ ಕಾರ್ಯಕರ್ತೆಯರಿಗೆ ಪ್ರತಿ ಆರು ತಿಂಗಳಿಗೊಮ್ಮೆ ನಿಯಮಿತ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಇದರೊಂದಿಗೆ ಅವರಿಗೆ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಲಾಭವನ್ನು ತಲುಪಿಸಲಾಗುತ್ತಿದೆ ಎಂದರು.

2030ರ ವೇಳೆಗೆ ಹೆಚ್.ಐ.ವಿ ನಿರ್ಮೂಲನೆ ಮಾಡುವ ಜಾಗತಿಕ ಗುರಿಯಾದ '95-95-95' ತತ್ವದಡಿ (ಶೇ. 95 ರಷ್ಟು ಜನರಿಗೆ ಸೋಂಕಿನ ಅರಿವು, ಚಿಕಿತ್ಸೆ ಮತ್ತು ವೈರಲ್ ಲೋಡ್ ನಿಯಂತ್ರಣ) ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಸಾರ್ವಜನಿಕರು ಯಾವುದೇ ಮುಜುಗರವಿಲ್ಲದೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಹೆಚ್.ಐ.ವಿ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಉತ್ತರ ಭಾರತ ಮತ್ತು ಪಶ್ಚಿಮ ಬಂಗಾಳದ ಕಾರ್ಮಿಕರಿಗಾಗಿ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸಲು ಹಾಗೂ ಸುಮಾರು 15,000 ದಿಂದ 20,000 ವಲಸೆ ಕಾರ್ಮಿಕರಿಗೆ ಹೆಚ್.ಐ.ವಿ ಪರೀಕ್ಷೆ ಮತ್ತು ಜಾಗೃತಿ ಮೂಡಿಸುವ ಅಗತ್ಯ ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾರ್ಮಿಕರ ವಿವರಗಳನ್ನು ಸುಲಭವಾಗಿ ದಾಖಲಿಸಲು ಮತ್ತು ಸ್ಕ್ಯಾನ್ ಮಾಡಲು QR ಕೋಡ್ಗಳನ್ನು ಬಳಸುವ ಬಗ್ಗೆ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದೇವೆಂದ್ರಪ್ಪ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಕೌಸರ್ ರೇಷ್ಮಾ, ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande