
ಬೆಳಗಾವಿ, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮವನ್ನು ಸತೀಶ್ ಜಾರಕಿಹೊಳಿ ಉದ್ಘಾಟಿಸಿ ಮಾತನಾಡಿದರು.
ಮಹಾತ್ಮ ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯ ಕನಸನ್ನು ನನಸಾಗಿಸಲು ಗ್ರಾಮ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡುವುದು ಸರ್ಕಾರದ ಆದ್ಯತೆ ಎಂದು ಅವರು ಹೇಳಿದರು. “ಜನರಿಂದ ಜನರಿಗಾಗಿ ನಡೆಯುವ ಆಡಳಿತ ಗ್ರಾಮ ಮಟ್ಟದಲ್ಲೇ ಆರಂಭವಾಗುತ್ತದೆ. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಎಂಬ ಮೂರು ಹಂತದ ವ್ಯವಸ್ಥೆ ಗ್ರಾಮೀಣ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿದೆ,” ಎಂದು ತಿಳಿಸಿದರು.
ಸರ್ಕಾರದ ಯೋಜನೆಗಳು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಲು ಪಂಚಾಯತ್ ರಾಜ್ ಇಲಾಖೆ ಹಾಗೂ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು. ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಕರ್ಯ ಒದಗಿಸಲು ಶಾಸಕಾಂಗ ಮತ್ತು ಕಾರ್ಯಾಂಗದ ಸಮನ್ವಯ ಅಗತ್ಯವಿದೆ ಎಂದರು.
ಗ್ರಾಮಗಳ ಸಬಲೀಕರಣ ಮತ್ತು ಸ್ಥಳೀಯ ಆಡಳಿತದ ಬಲವರ್ಧನೆಗೆ ಸರ್ಕಾರ ಬದ್ಧವಾಗಿದ್ದು, ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಿ ಜನಮನ ಗೆಲ್ಲುವ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಸೇರಿದಂತೆ ಅನೇಕ ಗಣ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಸಾಧನೆ ಮಾಡಿದ ವಿದ್ಯಾರ್ಥಿನಿ ಪ್ರಾರ್ಥನಾ ಬಿರಾದಾರ ಪಾಟೀಲ ಅವರನ್ನು ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa