
ಕೋಲ್ಕತ್ತಾ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳ ವಿಧಾನ ಸಭೆಯ ಎರಡನೇ ಹಂತದ ಚುನಾವಣೆಯ ಹಿನ್ನೆಲೆ, ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ರಾಜಸ್ಥಾನದ ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋತ್ ಅವರೊಂದಿಗೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಂಗಾಳದ ಅಸ್ಮಿತೆಗಾಗಿ ನಡೆಯುತ್ತಿರುವ ರಾಜಕೀಯ ಹೋರಾಟದಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು. ಎಸ್ಐಆರ್ ಹೆಸರಿನಲ್ಲಿ ಲಕ್ಷಾಂತರ ಮತದಾರರನ್ನು ಮತದಾನದ ಪ್ರಕ್ರಿಯೆಯಿಂದ ದೂರ ಮಾಡಲಾಗಿದೆ, ಇದರಿಂದ ಪ್ರಜೆಗಳ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದರು. ಜೊತೆಗೆ, ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪವನ್ನೂ ಮಾಡಿದರು.
ಮಹಿಳಾ ಮೀಸಲಾತಿ ಕಾಯ್ದೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಜನತಾ ಪಕ್ಷ ದೇಶದ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದು ಟೀಕಿಸಿದರು. ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಲು ಕಾಂಗ್ರೆಸ್ ಬದ್ಧವಾಗಿದ್ದು, ಬಿಜೆಪಿ ಮಹಿಳೆಯರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಹೇಳಿದರು.
ಇನ್ನೊಂದೆಡೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರವೂ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಬಂಗಾಳದ ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಅಭಿವೃದ್ಧಿ ಹಾಗೂ ಶಾಂತಿ–ಸೌಹಾರ್ದತೆಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa