ಕರವೇ ಪ್ರತಿಭಟನೆಗೆ ಕರೆ – ಸಿಪಿಐ ವಿರುದ್ಧ ಕ್ರಮಕ್ಕೆ ಆಗ್ರಹ
ವಿಜಯಪುರ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಸಿಪಿಐ ಗುರುಶಾಂತ ದಾಶ್ಯಾಳ ಅವರ ವಿರುದ್ಧ ಆರೋಪಗಳನ್ನು ಮುಂದಿಟ್ಟು, ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ನಾಳೆ (ಏಪ್ರಿಲ್ 27) ಉಗ್ರ ಹೋರಾಟ ಹಮ್ಮಿಕೊಳ್ಳಲಾಗಿದೆ
ಪ್ರತಿಭಟನೆ


ವಿಜಯಪುರ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಸಿಪಿಐ ಗುರುಶಾಂತ ದಾಶ್ಯಾಳ ಅವರ ವಿರುದ್ಧ ಆರೋಪಗಳನ್ನು ಮುಂದಿಟ್ಟು, ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ನಾಳೆ (ಏಪ್ರಿಲ್ 27) ಉಗ್ರ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಪ್ರಕಟಿಸಿದೆ.

ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಅವಳಿ ಜಿಲ್ಲಾ ಉಸ್ತುವಾರಿ ಅಶೋಕ್ ಹಾರಿವಾಳ ಅವರ ಮೇಲೆ ಅನ್ಯಾಯವಾಗಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆರೋಪಿಸಿರುವ ಕಾರ್ಯಕರ್ತರು, ಇದರಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 25 ವರ್ಷಗಳಿಂದ ನಿಸ್ವಾರ್ಥ ಹೋರಾಟ ನಡೆಸುತ್ತಿರುವ ನಾಯಕರ ವಿರುದ್ಧ ಏಕಾಏಕಿ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಅಶೋಕ್ ಹಾರಿವಾಳ ಅವರು ಬಡಜನರಿಗೆ ನ್ಯಾಯ ಒದಗಿಸಲು ಹಲವು ಹೋರಾಟಗಳನ್ನು ನಡೆಸಿದ್ದು, ಅವರ ಸಾಮಾಜಿಕ ಸೇವೆಯನ್ನು ಕಡೆಗಣಿಸಿ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಕರವೇ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಪಟ್ಟಣದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳದೆ, ನಿರ್ದಿಷ್ಟ ವ್ಯಕ್ತಿಗಳ ವಿರುದ್ಧ ಮಾತ್ರ ಪ್ರಕರಣ ದಾಖಲಿಸುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಪಿಐ ಗುರುಶಾಂತ ದಾಶ್ಯಾಳ ಅವರನ್ನು ತಕ್ಷಣ ಅಮಾನತು ಮಾಡಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ನಾಳೆ ಬೆಳಿಗ್ಗೆ 9 ಗಂಟೆಗೆ ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಕರವೇ ಕಾರ್ಯಕರ್ತರು ಸೇರಿ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳ ಅಧ್ಯಕ್ಷರು, ಗ್ರಾಮ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ.

ಒಟ್ಟಾರೆ, ಈ ಪ್ರತಿಭಟನೆ ಜಿಲ್ಲೆಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ಬೆಳವಣಿಗೆಗಳು ಗಮನ ಸೆಳೆಯುತ್ತಿವೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande