
ಬೆಂಗಳೂರು, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಪಠ್ಯಪುಸ್ತಕ ಮುದ್ರಣ ವಿಳಂಬವಾಗುತ್ತಿರುವ ಹಿನ್ನೆಲೆ, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಪಕ್ಷದ ನಾಯಕ ಆರ್.ಅಶೋಕ, “ಪಠ್ಯಪುಸ್ತಕ ಮುದ್ರಣದ ಸಮಸ್ಯೆ ಗಂಭೀರ ಹಂತಕ್ಕೆ ತಲುಪಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ ನಡೆಸುತ್ತಿದೆ” ಎಂದು ಆರೋಪಿಸಿದ್ದಾರೆ.
ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶೈಕ್ಷಣಿಕ ವರ್ಷ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿದ್ದರೂ, ಇನ್ನೂ ಪಠ್ಯಪುಸ್ತಕ ಮುದ್ರಣ ಕಾರ್ಯ ಸಮರ್ಪಕವಾಗಿ ಆರಂಭವಾಗಿಲ್ಲ ಎನ್ನುವುದು ಕಳವಳಕಾರಿ ಸಂಗತಿ ಎಂದು ಅವರು ಹೇಳಿದ್ದಾರೆ.
ಟೆಂಡರ್ ಪ್ರಕ್ರಿಯೆಯ ವಿಳಂಬ, ಮುದ್ರಣ ಕಾರ್ಯದ ನಿಧಾನಗತಿ, ಯೋಜನೆಗಳಲ್ಲಿ ಅವ್ಯವಸ್ಥೆ ಮತ್ತು ಇಲಾಖೆಗಳ ನಡುವೆ ಸಮನ್ವಯದ ಕೊರತೆ — ಇವುಗಳೆಲ್ಲವೂ ಸರ್ಕಾರದ ಅಸಮರ್ಥತೆಯನ್ನು ಬಯಲಿಗೆಳೆಯುತ್ತಿವೆ ಎಂದು ಟೀಕಿಸಿದ್ದಾರೆ.
“ಈ ನಿರ್ಲಕ್ಷ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ಉಂಟಾದ ಸಮಸ್ಯೆಗಳು ಮರುಕಳಿಸದಂತೆ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು, ಪಠ್ಯಪುಸ್ತಕಗಳು ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳ ಕೈಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa