
ವಿಜಯಪುರ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿರುವ ಶ್ರೀ ಗುಪ್ತಾಯಿದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ನೆರವೇರಿತು.
ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್, ಗ್ರಾಮೀಣ ಭಾಗದ ಸಂಪ್ರದಾಯಗಳು ಹಾಗೂ ದೇವಿ ಆರಾಧನೆ ನಮ್ಮ ಸಂಸ್ಕೃತಿಯ ಮೂಲಸ್ತಂಭಗಳಾಗಿವೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಾಯಿತು. ನಾಡಿನ ಶಾಂತಿ, ಸಮೃದ್ಧಿ ಹಾಗೂ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಅತಿಥಿಗೆ ಸನ್ಮಾನ ಮಾಡಲಾಗಿದ್ದು, ಅದನ್ನು ಅವರು ಗೌರವಪೂರ್ವಕವಾಗಿ ಸ್ವೀಕರಿಸಿದರು.
ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆಗಳು ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತ, ಭಕ್ತರಲ್ಲಿ ಭಕ್ತಿ ಹಾಗೂ ಆಧ್ಯಾತ್ಮಿಕ ಉತ್ಸಾಹ ಮೂಡಿಸಿತು. ಸಹಸ್ರಾರು ಭಕ್ತರು ದೇವಿಯ ದರ್ಶನ ಪಡೆದು ಹರಕೆ ತೀರಿಸಿಕೊಂಡರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮದ ಹಿರಿಯರು, ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಅನೇಕ ಭಕ್ತರು ಉಪಸ್ಥಿತರಿದ್ದು, ಜಾತ್ರೆಯನ್ನು ಯಶಸ್ವಿಗೊಳಿಸಿದರು.
ಗ್ರಾಮದಲ್ಲಿ ಜಾತ್ರಾ ಹಬ್ಬದ ಹಿನ್ನೆಲೆ ವಿಶೇಷ ಸಡಗರ ಕಂಡು ಬಂದಿದ್ದು, ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / jyothi deshpande